ಬೆಂಗಳೂರು: ಭಾರತ್ ನೆಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಾಲ ವ್ಯವಸ್ಥೆ ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲಹೆ ನೀಡಿದ ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್, ಪಂಚಾಯಿತಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಗೃಹ ಕಚೇರಿ ಕೃಷ್ಣಾಗೆ ಕೇಂದ್ರ ಪಂಚಾಯತ್ ರಾಜ್ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಇಂದು ಸಂಜೆ ಆಗಮಿಸಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ದೊಡ್ಡಜಾಲ ಮತ್ತು ರಾಜಾನುಕುಂಟೆ ಪಂಚಾಯತಿಗಳಲ್ಲಿ ಗ್ರಾಮೀಣ ಭಾಗದಲ್ಲಿ ಆಸ್ತಿ ಸೃಜನೆಗೆ ಹಾಗೂ ಗ್ರಾಮೀಣ ಆರ್ಥಿಕತೆಗೆ ಮಹತ್ವ ನೀಡಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಡಿಜಿಟಲ್ ಗ್ರಂಥಾಲಯಗಳಿಗೂ ಭೇಟಿ ನೀಡಿದ್ದಾಗಿ ತಿಳಿಸಿದ ಸಚಿವರು, ಭಾರತ್ ನೆಟ್ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಅಂತರ್ಜಾಲ ವ್ಯವಸ್ಥೆ ಉತ್ತಮಗೊಳಿಸುವಂತೆ ಸಲಹೆ ನೀಡಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ, ಈಗಾಗಲೇ ರಾಜ್ಯದ 5960 ಗ್ರಾಮ ಪಂಚಾಯಿತಿಗಳಿಗೂ ಅಂತರ್ಜಾಲ ವ್ಯವಸ್ಥೆ ಕಲ್ಪಿಸಲಾಗಿದೆ. ಕಟ್ಟ ಕಡೆಯ ವ್ಯಕ್ತಿಯೂ ಅಂತರ್ಜಾಲ ಸೌಲಭ್ಯ ಕಲ್ಪಿಸುವ ಪ್ರಯತ್ನ ಜಾರಿಯಲ್ಲಿದೆ ಎಂದು ತಿಳಿಸಿದರು.
ಅಮೃತ ಯೋಜನೆಯಡಿ 7500 ಸ್ತ್ರೀಶಕ್ತಿ ಗುಂಪುಗಳಿಗೆ ಸ್ವಯಂ ಉದ್ಯೋಗಕ್ಕಾಗಿ 1 ಲಕ್ಷ ರೂ.ಗಳ ಅನುದಾನ ನೀಡುವ ಯೋಜನೆಯನ್ನು ಘೋಷಿಸಲಾಗಿದೆ. ಕರ್ನಾಟಕದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆ ಸದೃಢವಾಗಿದೆ. ಅದನ್ನು ಇನ್ನಷ್ಟು ಬಲಪಡಿಸಲು ಆರ್ಥಿಕ ನೆರವು ಅಗತ್ಯ. ಪಂಚಾಯತಿಗಳಲ್ಲಿ ಆರ್ಥಿಕತೆಯ ವಿಕೇಂದ್ರೀಕರಣವೂ ಆಗಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಶಾಲಾ ಕಟ್ಟಡಗಳಿಗೆ ಅನುದಾನ ದೊರೆತರೆ ಆಸ್ತಿ ಸೃಜನೆಗೆ ಅನುಕೂಲವಾಗಲಿದೆ ಎಂದು ಹೇಳಿದರು.