ಬೆಂಗಳೂರು: ಕೊರೊನಾ ಚಿಕಿತ್ಸೆ ಫಲಿಸದೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರಿಗೆ ರಾಜ್ಯ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹ್ಮದ್, ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಟ್ವೀಟ್ನಲ್ಲಿ, ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದ ಸುರೇಶ್ ಅಂಗಡಿ ನಿಧನ ಆಘಾತ ತಂದಿದೆ. ಅವರು ಸದಾ ರಾಜ್ಯದ ಅಭಿವೃದ್ಧಿಯ ಬಗ್ಗೆ ಕಾಳಜಿ ವಹಿಸುತ್ತಿದ್ದರು. ಸ್ನೇಹಜೀವಿಯಾಗಿದ್ದ ಸುರೇಶ್ ಅಂಗಡಿ ರಾಜ್ಯದ ಅಭಿವೃದ್ಧಿ ಬಗ್ಗೆ ಅಪಾರ ಕಾಳಜಿ ಉಳ್ಳವರಾಗಿದ್ದರು. ಅವರ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು, ಅವರ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಮ್ಮ ಶೋಕ ಸಂದೇಶದಲ್ಲಿ, ರಾಜ್ಯದಿಂದ ಆಯ್ಕೆಯಾಗಿ ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಹಠಾತ್ ನಿಧನ ಆಘಾತ ತಂದಿದೆ. ಕೋವಿಡ್19 ನಿಂದಾಗಿ ಅವರು ನಿಧನರಾಗಿರುವುದು ಬೇಸರದಾಯಕ. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು ಹಾಗೂ ಆಪ್ತರಿಗೆ ನೋವು ಭರಿಸುವ ಶಕ್ತಿ ಬರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವೀಟ್ ಖಾತೆಯಲ್ಲಿ ಸಂತಾಪ ಸೂಚಿಸಿದ್ದು, ಬೆಳಗಾವಿ ಸಂಸದರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನ ಆಘಾತಕಾರಿ. ಅವರ ನಿಧನಕ್ಕೆ ತೀವ್ರ ಸಂತಾಪಗಳು. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ಲಭಿಸಲಿ. ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದಿದೆ.
ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಟ್ವೀಟ್ನಲ್ಲಿ, ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಸಂಸತ್ ಸದಸ್ಯರಾಗಿ ಆಯ್ಕೆಯಾಗಿ ಇದೇ ಮೊದಲ ಬಾರಿಗೆ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸರಳ ಸಜ್ಜನಿಕೆಯ ರಾಜಕಾರಣಿ ಸುರೇಶ್ ಚನ್ನಬಸಪ್ಪ ಅಂಗಡಿ ಅವರ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತ ಹಾಗೂ ಅತೀವ ದುಃಖವಾಗಿದೆ ಎಂದಿದ್ದಾರೆ.
ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ್ ಖರ್ಗೆ ತಮ್ಮ ಟ್ವೀಟ್ನಲ್ಲಿ, ನನ್ನ ಸ್ನೇಹಿತ ಹಾಗೂ ಲೋಕಸಭೆಯಲ್ಲಿ ಸಹೋದ್ಯೋಗಿಯಾಗಿದ್ದ ಸುರೇಶ್ ಅಂಗಡಿ ನಿಧನ ಸುದ್ದಿ ಕೇಳಿ ಆಘಾತವಾಯಿತು. ಜನರಿಗಾಗಿ ಕಾರ್ಯನಿರ್ವಹಿಸುವ ಬದ್ಧತೆಯನ್ನು ಹೊಂದಿದ್ದ ಉತ್ತಮ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ಇವರ ಅಗಲುವಿಕೆಯ ನಷ್ಟವನ್ನು ಬರಿಸಿಕೊಳ್ಳುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಮ್ಮ ಸಂತಾಪ ಸಂದೇಶದಲ್ಲಿ, ಬೆಳಗಾವಿ ಸಂಸದರು ಹಾಗೂ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾದ ಸುರೇಶ್ ಅಂಗಡಿ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ಅವರ ನಿಧನಕ್ಕೆ ತೀವ್ರ ಸಂತಾಪಗಳು. ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿ ಆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.