ಬೆಂಗಳೂರು : ಸಂಸದ ತೇಜಸ್ವಿ ಸೂರ್ಯ ಅವರು ಕೋವಿಡ್-19 ನಿಯಮ ಉಲ್ಲಂಘಿಸಿದ್ದು, ಅವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಹೈಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ.
ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿರುವ ಜನಪ್ರತಿನಿಧಿಗಳು ಹಾಗೂ ನಟ-ನಟಿಯರ ವಿರುದ್ಧ ಕಾನೂನು ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಪೂರಕವಾಗಿ ಈ ಅರ್ಜಿ ಸಲ್ಲಿಸಲಾಗಿದೆ. ನಗರದ ಸಾಮಾಜಿಕ ಕಾರ್ಯಕರ್ತೆ ಹಾಗೂ ವಕೀಲೆ ಗೀತಾ ಮಿಶ್ರಾ ಈ ಅರ್ಜಿ ಸಲ್ಲಿಸಿದ್ದು, ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ಅರ್ಜಿ ಸಾರಾಂಶ : ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಸಂಸದ ತೇಜಸ್ವಿ ಸೂರ್ಯ ಅವರನ್ನು ಸೆಪ್ಟೆಂಬರ್ 30ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿವರೆಗೂ ಮೆರವಣಿಗೆ ಮೂಲಕ ಕರೆತರಲಾಗಿದೆ. ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯಾರೊಬ್ಬರೂ ಮಾಸ್ಕ್ ಧರಿಸಿರಲಿಲ್ಲ, ಸಾಮಾಜಿಕ ಅಂತರ ಕಾಯ್ದುಕೊಂಡಿರಲಿಲ್ಲ. ಸ್ವತಃ ಸಂಸದ ತೇಜಸ್ವಿ ಸೂರ್ಯ ಅವರೇ ನಿಯಮಗಳನ್ನು ಪಾಲಿಸಿಲ್ಲ.
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವ ತೇಜಸ್ವಿ ಸೂರ್ಯ ವೃತ್ತಿಪರ ವಕೀಲರಾಗಿದ್ದಾರೆ. ಅವರು ಸಾರ್ವಜನಿಕರಿಗೆ ಬೆಂಬಲಿಗರಿಗೆ ಮಾದರಿಯಾಗಿರಬೇಕು. ಹಾಗಿದ್ದರೂ ಕೇಂದ್ರ ಸರ್ಕಾರದ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸಿದ್ದಾರೆ. ಸಂಸದರ ಮೆರವಣಿಗೆ ಸಂದರ್ಭದಲ್ಲಿ ಮಾರ್ಗಸೂಚಿಗಳನ್ನು ಉಲ್ಲೇಖಿಸುತ್ತಿರುವುದು ಕಂಡು ಬಂದರು ಕ್ರಮ ಜರುಗಿಸದೆ ಪೊಲೀಸರು ಮೌನವಹಿಸಿದ್ದಾರೆ.
ಆದ್ದರಿಂದ, ಸಂಸದರು ಮತ್ತು ಅವರ ಬೆಂಬಲಿಗರ ವಿರುದ್ಧ ಹಾಗೂ ಮೌನವಹಿಸಿದ್ದ ಪೊಲೀಸರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ದೂರು ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.