ಆನೇಕಲ್: ಸಿಬ್ಬಂದಿಗಳ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮಾಯಸಂದ್ರ ಗ್ರಾಮದ ಡಿಹೆಚ್ಎಲ್ ಕಂಪನಿಯಲ್ಲಿ ನಿನ್ನೆ ನಡೆದಿದ್ದು, ತಡವಾಗಿ ಬೆಳಿಕಿಗೆ ಬಂದಿದೆ.
ರಾಚಮಾನಹಳ್ಳಿ ಮೂಲದ ಉಷಾ (28) ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಉಷಾ, ಕಳೆದ ಐದು ವರ್ಷಗಳಿಂದ ಡಿಹೆಚ್ಎಲ್ ಕಂಪನಿಯಲ್ಲಿ ಕೆಲಸ ಮಾಡಿ ಜೀವನ ಸಾಗುಸುತಿದ್ದರು. ಆದರೆ, ಇತ್ತೀಚಿಗೆ ಕಂಪನಿಯ ರಮೇಶ್ ಗಾಂಧಿ, ಪುಷ್ಪ ನಾಗರಾಜ್ ಮತ್ತು ಬಾಲರೆಡ್ಡಿ ಎಂಬ ಸಿಬ್ಬಂದಿಗಳು ಕೆಲಸ ಬಿಟ್ಟು ಹೋಗುವಂತೆ ಟಾರ್ಚರ್ ಮಾಡುತ್ತಿದ್ದರು ಎಂದು ಆರೋಪಿಸಿರುವ ಉಷಾ, ಇದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಆತ್ಮಹತ್ಯೆಗೆ ಯತ್ನಿಸುತ್ತಿದ್ದಂತೆ ಕೂಡಲೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದರಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಈ ಘಟನೆ ಸಂಬಂಧ ಕುಟುಂಬಸ್ಥರು ಹಾಗೂ ಸ್ಥಳೀಯರು ಕಂಪನಿಯ ಮುಂದೆ ಪ್ರತಿಭಟನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.