ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 9 ರ ತನಕ ಭಾರಿ ಪ್ರಮಾಣದಲ್ಲಿ ಮಳೆಯಾಗಲಿದ್ದು, ನಂತರದ ದಿನಗಳಲ್ಲಿ ವರುಣನ ಅಬ್ಬರ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ. ಹೀಗಾಗಿ, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ಮಾಹಿತಿ ನೀಡಿದೆ.
ಎಲ್ಲೆಲ್ಲಿ ಯೆಲ್ಲೋ ಅಲರ್ಟ್:
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ:
ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಸಹ ಹೆಚ್ಚು ಮಳೆಯಾಗಬಹುದು ಎಂದು ಅಂದಾಜಿಸಿದೆ.
ಉತ್ತರದಲ್ಲಿ ಒಣ ಹವೆ:
ಉತ್ತರ ಒಳನಾಡಿನ ಬಹುತೇಕ ಕಡೆ ಒಣ ಹವೆ ಮುಂದುವರೆಯಲಿದ್ದು, ಕೆಲವು ಕಡೆ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬೆಳಗಿನಿಂದ ನಗರದಲ್ಲಿ ಮಳೆ:
ಬೆಂಗಳೂರು ನಗರದಲ್ಲಿ ಸೋಮವಾರ ಮುಂಜಾನೆಯೇ ಜಿಟಿ ಜಿಟಿ ಮಳೆಯಾಗುತ್ತಿದೆ. ಕೆ.ಆರ್ ಪುರಂ, ರಾಜಾಜಿನಗರ, ಮಲೇಶ್ವರಂ ಸೇರಿದಂತೆ ನಗರದ ಹಲವೆಡೆ ತುಂತುರು ಮಳೆಯಾಗಿದೆ.