ಬೆಂಗಳೂರು : ಮದುವೆಯಾಗುವುದಾಗಿ ನಂಬಿಸಿ ಕಾಲೇಜು ವಿದ್ಯಾರ್ಥಿನಿಯ ಮೇಲೆ ಸಹಪಾಠಿಯೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎನ್ನುವ ಆರೋಪ ಕೇಳಿಬಂದಿದೆ.
2018 ರಲ್ಲಿ ಬೆಂಗಳೂರು ನಗರದ ಖಾಸಗಿ ಕಾಲೇಜೊಂದರಲ್ಲಿ ಯುವತಿ ಮತ್ತು ಆರೋಪಿ ವ್ಯಾಸಂಗ ಮಾಡುತ್ತಿದ್ದರು. ಕಾಲೇಜಿನಲ್ಲಿ ಪರಿಚಯವಾಗಿ ನಂತರ ಒಬ್ಬರನೊಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ದಿನಕಳೆದಂತೆ ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಯುವಕ ಸಲುಗೆಯಿಂದ ಇದ್ದ ಎನ್ನಲಾಗಿದೆ.
ಇತ್ತೀಚೆಗೆ ಮದುವೆಯಾಗು ಎಂದು ಯುವತಿ ಹೇಳಿದಾಗ, ಅದಕ್ಕೆ ಯುವಕ ನಿರಾಕರಿಸಿದ್ದು, ಮದುವೆ ಹೆಸರಲ್ಲಿ ಯುವತಿಯಿಂದ 6 ಲಕ್ಷ ಹಣ ಪಡೆದು ವಂಚಿಸಿದ್ದಾನೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.
ಈ ಕುರಿತು ಯುವಕನ ವಿರುದ್ಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಯುವತಿ ದೂರು ನೀಡಿದ್ದಾಳೆ. ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.