ಬೆಂಗಳೂರು: ಮಾಜಿ ಸಚಿವ ಹಾಗೂ ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ ವಿಷಯವನ್ನ ಸ್ವತಃ ಜಮೀರ್ ಅವರೇ ದೃಢಪಡಿಸಿದ್ದಾರೆ. ಸಣ್ಣ ಪ್ರಮಾಣದ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಇಂದು ಕೊರೊನಾ ಸೋಂಕು ಪರೀಕ್ಷೆಗೆ ಒಳಗಾಗಿದ್ದೆ. ವರದಿಯಲ್ಲಿ ಸೋಂಕು ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನೊಂದಿಗೆ ಸಂಪರ್ಕವಿದ್ದವರು ಸೋಂಕು ಪರೀಕ್ಷೆಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ.
ಪಾದರಾಯನಪುರ ವ್ಯಾಪ್ತಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಸಂದರ್ಭದಲ್ಲಿಯೂ, ಸಾಕಷ್ಟು ಓಡಾಡಿಕೊಂಡಿದ್ದ ಜಮೀರ್ ಅಹ್ಮದ್, ಮೂರ್ನಾಲ್ಕು ಬಾರಿ ಕೋವಿಡ್ ತಪಾಸಣೆಗೆ ಒಳಗಾಗಿದ್ದರು. ಆದರೆ ಆಗ ವರದಿ ನೆಗೆಟಿವ್ ಬಂದಿತ್ತು.
ಕಳೆದ ವಾರ ಬೆಂಗಳೂರಿನ ಡಿ ಜೆ ಹಳ್ಳಿ ಹಾಗೂ ಕೆ ಜಿ ಹಳ್ಳಿ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂದರ್ಭ ಅಲ್ಲಿಗೆ ಭೇಟಿ ನೀಡಿದ್ದ ಕಾರಣ ಜಮೀರ್ ಅವರಿಗೆ ಸೋಂಕು ತಗುಲಿದೆ ಎಂದು ಅಂದಾಜಿಸಲಾಗಿದೆ.