ಚಿಕ್ಕಬಳ್ಳಾಪುರ/ದಾವಣಗೆರೆ: ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರದ ವತಿಯಿಂದ ನೀಡಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಂದನೂರಿನಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿ ನಡೆದಿದೆ.
ಚಂದನದೂರು ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಸರ್ಕಾರವು ನೀಡಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಮಿಶ್ರಿತ ಅಕ್ಕಿ ಮಕ್ಕಳಿಗೆ ನೀಡಲಾಗಿದ್ದು, ಇದರಿಂದ ಪೋಷಕರು ಕಂಗಾಲಾಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಶಾಲೆಯ ಮಕ್ಕಳಿಗೆ ಕೊಟ್ಟ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆಯಾಗಿದೆ.
ಅಂತೆಯೇ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮದಲ್ಲಿಯೂ ಅಂಗನವಾಡಿಯಲ್ಲಿ ಮಕ್ಕಳಿಗೆ ನೀಡುವ ಪಡಿತರ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಮಿಶ್ರಗೊಂಡಿರುವ ಬಗ್ಗೆ ಗ್ರಾಮಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಮಾಹಿತಿ ಅರಿತ ಸಿಡಿಪಿಒ ನಿರ್ಮಲಾ, ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿ ಗ್ರಾಮಕ್ಕೆ ದೌಡಾಯಿಸಿ ಅಕ್ಕಿ ಪರಿಶೀಲನೆ ನಡೆಸಿದ್ದಾರೆ.