ಚಿಕ್ಕಮಗಳೂರು/ದಾವಣಗೆರೆ : ಕೋಲ್ಕತಾದಲ್ಲಿ ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಇಂದು ದೇಶವ್ಯಾಪಿ ವೈದ್ಯರ ಮುಷ್ಕರ ಹಿನ್ನೆಲೆ ದಾವಣಗೆರೆಯಲ್ಲೂ ಸಹ ಬೆಂಬಲ ವ್ಯಕ್ತವಾಗಿದ್ದು, ವೈದ್ಯ ಸಂಘದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರದ ಜಿಲ್ಲಾಸ್ಪತ್ರೆಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ವೈದ್ಯರು, ಜಯದೇವ ವೃತ್ತದ ಮೂಲಕ ಗಾಂಧಿ ವೃತ್ತದವರೆಗೆ ಮೆರವಣಿಗೆ ಹೊರಟು ಆಕ್ರೋಶ ವ್ಯಕ್ತಪಡಿಸಿದರು. ಬೆಳಿಗ್ಗೆ 6ರಿಂದ 24ಗಂಟೆಗಳ ಕಾಲ ಮುಷ್ಕರ ಹಮ್ಮಿಕೊಳ್ಳಲಾಗಿದ್ದು, ತುರ್ತು ಪರಿಸ್ಥಿತಿ ಮತ್ತು ಒಳರೋಗಿಗಳಿಗೆ ಮಾತ್ರ ಚಿಕಿತ್ಸೆ ಲಭ್ಯವಿತ್ತು.
ಇನ್ನೂ ಮುಷ್ಕರ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ.ನೀಲಾಂಬಿಕೆ, ತುರ್ತು ಚಿಕಿತ್ಸೆ ಸೇರಿದಂತೆ ಎಲ್ಲಾ ಚಿಕಿತ್ಸೆ ಆರಂಭ ಆಗಿದೆ. ರೋಗಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇತ್ತ ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ಪ್ರತಿಭಟನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವೈದ್ಯರ ಮೇಲಿನ ಹಲ್ಲೆ ಖಂಡಿಸಿ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆ ಓಪಿಡಿ ಸೇವೆ ಸ್ಥಗಿತಗೊಳಿಸಿ ವೈದ್ಯರು ಪ್ರತಿಭಟನೆ ನಡೆಸಿದರು. ನಗರದ ಗಾಂಧಿ ಪ್ರತಿಮೆ ಬಳಿ ಐವತ್ತಕ್ಕೂ ಹೆಚ್ಚು ವೈದ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ, ಗಾಂಧಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿದರು. ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.