ದಾವಣಗೆರೆ: ಕೊರೊನಾ 3ನೇ ಅಲೆ ಭೀತಿ ಜನರಲ್ಲಿ ಮನೆ ಮಾಡಿದೆ. ಆದ್ದರಿಂದ ಜಿಲ್ಲೆಯ ಗಡಿಗಳಲ್ಲಿ ಪೊಲೀಸ್ ಇಲಾಖೆ ಕಟ್ಟು ನಿಟ್ಟಿನ ಕ್ರಮ ವಹಿಸಲು ಮುಂದಾಗಿದೆ. ಮಾಸ್ಕ್ ಧರಿಸದೇ ಹೊರ ಬಂದರೆ ದಂಡ ವಿಧಿಸುವ ಪ್ರಕ್ರಿಯೆ ಮತ್ತೆ ಆರಂಭಿಸಲಾಗುವುದು ಎಂದು ಎಸ್ಪಿ ಸಿ.ಬಿ ರಿಷ್ಯಂತ್ ಖಡಕ್ ವಾರ್ನಿಂಗ್ ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಕೇರಳ, ಮಹಾರಾಷ್ಟ್ರದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದಲ್ಲದೇ ರಾಜ್ಯದ ಬಹುತೇಕ ಕಡೆಗಳಲ್ಲಿಯೂ ಕೇಸ್ ಹೆಚ್ಚಾಗುತ್ತಿವೆ. ಆದ್ದರಿಂದ ಜಿಲ್ಲೆಯಲ್ಲಿ ಕೊರೊನಾ ಕೇಸ್ಗಳು ಹೆಚ್ಚಾದರೆ ಕಷ್ಟವಾಗುತ್ತದೆ. ಅಗತ್ಯ ಇದ್ದರೆ ಮಾತ್ರ ಹೊರಗೆ ಬನ್ನಿ ಎಂದು ಜನರಲ್ಲಿ ಮನವಿ ಮಾಡಿದರು.
ಮದುವೆ, ಜಾತ್ರೆ, ವಿಶೇಷ ಸಮಾರಂಭಗಳ ಬಗ್ಗೆ ನಿಗಾ ಇಡಲಾಗುತ್ತಿದ್ದು, ಸಾರ್ವಜನಿಕರ ಸಹಕಾರ ಸಹ ಮುಖ್ಯವಾಗಿದೆ. ಪೊಲೀಸ್ ಇಲಾಖೆಯಿಂದ ಅಗತ್ಯ ಕ್ರಮಗಳನ್ನ ಕೈಕೊಳ್ಳಲಾಗುತ್ತಿದೆ ಎಂದು ಎಸ್ಪಿ ಸಿ.ಬಿ ರಿಷ್ಯಂತ್ ಮಾಹಿತಿ ನೀಡಿದರು.