ದಾವಣಗೆರೆ: ರಾಜ್ಯದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದು, ಶಾಸಕರ ಬಲವೂ ಇದೆ. ನಮಗೆ ಬಾಹ್ಯ ಬೆಂಬಲದ ಅವಶ್ಯಕತೆ ಇಲ್ಲ. ಒಂದು ವೇಳೆ ನೀಡುತ್ತೇವೆ ಎಂದರೆ ಬೇಡ ಅನ್ನಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮ ಪಂಚಾಯ್ತಿ ನೂತನ ಕಟ್ಟಡ ಉದ್ಘಾಟನೆಗೆ ಆಗಮಿಸಿದ ವೇಳೆ ಮಾಧ್ಯಮದವರ ಜೊತೆ ಮಾತನಾಡಿದ ಈಶ್ವರಪ್ಪ, ಕೇಂದ್ರ ಸರ್ಕಾರಕ್ಕೆ ಸಂಪೂರ್ಣ ಬಹುಮತ ಇದ್ದರೂ ಅನೇಕ ಪಕ್ಷಗಳು ಬೆಂಬಲ ನೀಡಿವೆ. ರಾಜ್ಯದಲ್ಲಿಯೂ ನೀಡುತ್ತೇವೆ ಎಂದರೆ ಬೇಡ ಎನ್ನುವುದಿಲ್ಲ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪತನ ಆಗಲು ಬಿಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪಿಎಂ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಈಗಾಗಲೇ ಕಾಂಗ್ರೆಸ್ ಜೊತೆ ಹೋಗಿದ್ದ ಜೆಡಿಎಸ್ಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಿದ್ದಾರೆ. ಬಹುಮತ ಇಲ್ಲದಿದ್ದರೂ ಬಿಜೆಪಿ ಅಧಿಕಾರದಲ್ಲಿರಬೇಕೆಂಬ ವಾತಾವರಣ ನಿರ್ಮಾಣ ಆಗಿದೆ. ಚುನಾವಣೆ ಬಂದರೆ ಬಿಜೆಪಿ ಸಂಪೂರ್ಣ ಬಹುಮತ ಪಡೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.