ದಾವಣಗೆರೆ: ಜಿಲ್ಲಾಡಳಿತ ಕೊರೊನಾ ನಿಯಂತ್ರಣಕ್ಕೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಯಶಸ್ವಿಯಾಗಿದ್ದು, ಮುಂದೆಯೂ ಒಂದೂ ಪ್ರಕರಣ ವರದಿಯಾಗದಂತೆ ಕ್ರಮಗಳು ಜಾರಿಯಲ್ಲಿರಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಸೂಚನೆ ನೀಡಿದರು.
ಜಿಲ್ಲಾಡಳಿತ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್-19 ವೈರಾಣು ನಿಯಂತ್ರಣ ಕುರಿತು ಏರ್ಪಡಿಸಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಬೇರೆ ಕೆಲವು ಅಕ್ಕಪಕ್ಕದ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ನಮ್ಮಲ್ಲಿ ಉತ್ತಮ ಮಾನವ ಸಂಪನ್ಮೂಲ, ಮೂಲ ಸೌಕರ್ಯಗಳಿದ್ದು, ಜಿಲ್ಲಾಡಳಿತವೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.
ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ರಾಘವನ್ ಮಾತನಾಡಿ, ಕೊರೊನಾ ವೈರಸ್‍ಗೆ ಸಂಬಂಧಿಸಿದಂತೆ ಖಚಿತಪಟ್ಟ ಮೂರು ಪ್ರಕರಣಗಳಲ್ಲಿ ಮೂರೂ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಪರೀಕ್ಷೆ ಮಾಡಲು ಸಂಗ್ರಹಿಸಲಾದ 72 ಮಾದರಿಗಳ ಪೈಕಿ 67 ನೆಗೆಟಿವ್ ಬಂದಿವೆ. ಸಿಜಿ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆ ಎಂದು ಗುರುತಿಸಿ ಎಲ್ಲಾ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜೊತೆಗೆ ನಗರದ ನಾಲ್ಕು ಆಸ್ಪತ್ರೆಗಳು ಸೇರಿದಂತೆ ಪ್ರತಿ ತಾಲೂಕುಗಳಲ್ಲಿ ತಲಾ ಐದು ಐಸೋಲೇಷನ್ ಬೆಡ್‍ಗಳನ್ನು ಗುರುತಿಸಲಾಗಿದೆ ಎಂದು ತಿಳಿಸಿದರು.
ಕಂಟೈನ್‍ಮೆಂಟ್ ಝೋನ್‍ನಲ್ಲಿ 1993 ಮನೆಗಳಿಂದ 4784 ಜನರನ್ನು ಸಂದರ್ಶಿಸಿ ಫ್ಲೂ ಸಮೀಕ್ಷೆ ಮಾಡಲಾಗಿದೆ. ಮತ್ತು ದೆಹಲಿಯ ನಿಜಾಮುದ್ದೀನ್ ಸಮಾವೇಶಕ್ಕೆ ಹೋಗಿ ಬಂದವರಲ್ಲಿ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಇವರ ಕುರಿತಾಗಿ ಪ್ರತಿದಿನದ ವರದಿಯನ್ನು ಸಂಗ್ರಹಿಸಲಾಗುತ್ತಿದೆ ಎಂದು ತಿಳಿಸಿದರು.