ಹುಬ್ಬಳ್ಳಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿದ ಕೊರೊನಾ ವಾರಿಯರ್ಸ್‌ಗಳಾದ ಪೊಲೀಸ್ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಊಟದ ಡಬ್ಬಿಯನ್ನು ನೀಡಿ ಅಭಿನಂದನೆ ಸಲ್ಲಿಸಿದರು. ಉಪನಗರ ಪೊಲೀಸ್ ಠಾಣೆ ಆವರಣದಲ್ಲಿ ಪೊಲೀಸ್ ಸಿಬ್ಬಂದಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಊಟದ ಬಾಕ್ಸ್ ನೀಡಿ ಶುಭ ಕೋರಿದರು.
ಇದೇ ವೇಳೆ ಮಾತನಾಡಿದ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಚಿಟಗುಪ್ಪಿ ಕಾಲೋನಿಯ ಜನರ ಸಹಯೋಗದಲ್ಲಿ ಲಾಕ್ಡೌನ್ ಪರಿಸ್ಥಿತಿಯಲ್ಲಿ ಕೂಡ ಕಾರ್ಯನಿರ್ವಹಿಸಿದ ಪೊಲೀಸರಿಗೆ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಊಟವನ್ನು ವಿತರಣೆ ಮಾಡುವ ಸದುದ್ದೇಶದಿಂದ ಈ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ರಾಜ್ಯ ಬಿಜೆಪಿಯಲ್ಲಿ ಭುಗಿಲೆದ್ದಿರುವ ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಕೊರೊನಾ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ ಕುರಿತು ಭಿನ್ನಮತ ಸ್ಫೋಟಗೊಂಡಿರುವುದು ಸರಿಯಲ್ಲ. ಇಂತಹ ಉದ್ವಿಗ್ನ ಪರಿಸ್ಥಿತಿಯಲ್ಲಿ ರಾಜಕೀಯ ಮಾಡುತ್ತಿರುವುದನ್ನು ನೋಡಿದರೆ ರಾಜಕೀಯ ಬಹಳ ಕೆಳಮಟ್ಟಕ್ಕೆ ಹೋಗಿದೆ ಅಂತ ಅನಿಸುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.
ರಾಜೀನಾಮೆ ನೀಡಿ ಯಾರೇ ಬಂದರೂ ಜೆಡಿಎಸ್ ಅವರನ್ನು ಒಳಗೆ ಸೇರಿಸಿಕೊಳ್ಳುವುದಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
ಹೇಳುವುದು ವೇದಾಂತ ತಿನ್ನೋದು ಬದನೆಕಾಯಿ ಅನ್ನೋ ರೀತಿಯಾಗುತ್ತೆ. ಹೀಗಾಗಿ ಚುನಾಯಿತ ಪ್ರತಿನಿಧಿಯನ್ನು ರಾಜೀನಾಮೆ ಕೊಡಿಸಿ ರಾಜಕೀಯ ಮಾಡುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.