ಹುಬ್ಬಳ್ಳಿ: ರಾಜ್ಯ ಸರ್ಕಾರ ಕೋವಿಡ್ ನಿಯಂತ್ರಣದಲ್ಲಿ ವಿಫಲವಾಗಿದೆ. ನಿರ್ಲಕ್ಷ್ಯ ತೋರಿದ್ದಲ್ಲದೆ ಕೋಟ್ಯಂತರ ರೂಪಾಯಿ ಅಕ್ರಮ ನಡೆಸಿದೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ಆರೋಪಿಸಿದ್ದಾರೆ.
ನಗರದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಅವ್ಯವಹಾರ ಪ್ರಶ್ನಿಸಿದ ಪ್ರತಿಪಕ್ಷಗಳಿಗೆ ನೋಟಿಸ್ ನೀಡಿದ್ದು, ಪ್ರಜಾಪ್ರಭುತ್ವಕ್ಕೆ ಮಾರಕವೆಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಬಿಜೆಪಿ ಸರ್ಕಾರ ದೇಶದಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಆರೋಪ ಮಾಡುವ ಪ್ರತಿಪಕ್ಷಗಳಿಗೆ ನೋಟಿಸ್ ನೀಡುವ ಮಟ್ಟಕ್ಕೆ ಇಳಿದಿರುವುದು ಖಂಡನೀಯ ಎಂದರು.
ರಾಜ್ಯ ಸರ್ಕಾರಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಸಹಕಾರ ನೀಡಿದೆ. ಆದರೆ ಜವಾಬ್ದಾರಿಯುತವಾಗಿ ಕೆಲಸ ಮಾಡುವ ಪ್ರತಿಪಕ್ಷ ಲೋಪದೋಷಗಳನ್ನು ಜನರ ಮುಂದಿಟ್ಟಿದೆ. ಅದನ್ನು ಒಪ್ಪಿಕೊಂಡು ತಿದ್ದಿಕೊಳ್ಳುವುದನ್ನು ಬಿಟ್ಟು ಆಡಳಿತ ಪಕ್ಷ ಮೊಂಡುತನ ಪ್ರದರ್ಶನ ಮಾಡುತ್ತಿದೆ ಎಂದು ಹರಿಹಾಯ್ದರು.