ಹುಬ್ಬಳ್ಳಿ: ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಬಸ್ ಪಲ್ಟಿಯಾಗಿ ಬಿದ್ದು, ಇಬ್ಬರು ಸಾವನ್ನಪ್ಪಿರುವ ಘಟನೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ನಡೆದಿದೆ.
ಹುಬ್ಬಳ್ಳಿಯಿಂದ ಗದಗ ಕಡೆ ತೆರಳುತ್ತಿದ್ದ ಬಸ್, ಗದಗ ಕಡೆಯಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದರೆ, ಸರ್ಕಾರಿ ಬಸ್ ನಿಯಂತ್ರಣ ತಪ್ಪಿ ಪಕ್ಕದ ಹೊಲದಲ್ಲಿ ಹೋಗಿ ಬಿದ್ದಿದೆ.
ಮೃತರನ್ನು ಸುಹಾಸಿನಿ (46) ಹಾಗೂ ಚಾಲಕ ಮಹೇಶ (30) ಎಂದು ಗುರುತಿಸಲಾಗಿದೆ. ಇವರು ಆಂಧ್ರಪ್ರದೇಶದ ಕರ್ನೂಲ್‌ನಿಂದ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾಕ್ಕೆ ಹೋಗುತ್ತಿದ್ದರು. ಬಸ್ನಲ್ಲಿದ್ದ ಎಂಟು ಜನ ಹಾಗೂ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಕಿಮ್ಸ್ಗೆ ದಾಖಲಿಸಲಾಗಿದೆ.
ಈ ಸಂಬಂಧ ಅಣ್ಣಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.