ಹುಬ್ಬಳ್ಳಿ: ದೇಶದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ರಾಜ್ಯದಲ್ಲಿ 24 ಕ್ಷೇತ್ರಗಳು ಬಿಜೆಪಿ ಪಾಲಾಗಲಿವೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ. ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಒಂದಾಗಿದ್ದಾರೆ. ಆದರೆ, ತಳಮಟ್ಟದಲ್ಲಿ ಆ ಪಕ್ಷಗಳ ಕಾರ್ಯಕರ್ತರು ಕಚ್ಚಾಡುತ್ತಿದ್ದಾರೆ. ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಕಡೆಗಣಿಸಿದೆ. ಹೀಗಾಗಿ, ಪ್ರಧಾನಿ ವಿರುದ್ಧ ಮಾತನಾಡುತ್ತಿದ್ದಾರೆ ಎಂದು ದೂರಿದರು.
ಹೈದರಾಬಾದ್ ಕರ್ನಾಟಕದ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ. ಲೋಕಸಭಾ ಚುನಾವಣೆ ಮುಗಿದ ಬಳಿಕ ಮೈತ್ರಿ ಸರ್ಕಾರ ಪತನವಾಗಲಿದೆ. ಸಿಎಂ ಕುಮಾರಸ್ವಾಮಿ ಉತ್ತರ ಕರ್ನಾಟಕ ಭಾಗವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಕೇವಲ ಐದು ಜಿಲ್ಲೆಗಳಿಗೆ ಸೀಮಿತರಾಗಿ ಮಂಡ್ಯಕ್ಕೆ ಮುಂಗಡ ಅನುದಾನ ನೀಡಿದ್ದಾರೆ. ಅದರಲ್ಲಿ ಬಂದ ಕಮೀಷನ್ ಹಣದಲ್ಲಿ ಮಂಡ್ಯ ಎಲೆಕ್ಷನ್ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.