ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಪ್ರತಿನಿತ್ಯ 300 ರಿಂದ 400 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ನಿಗಾ ವಹಿಸಬೇಕಿದೆ.
ಕಳೆದ ಬಾರಿ ವಯೋವೃದ್ಧರಲ್ಲೇ ಹೆಚ್ಚಾಗಿ ಕೊರೊನಾ ಸೋಂಕು ಕಾಣಿಸಿಕೊಂಡಿತ್ತು. ಆದರೆ, ಕೊರೊನಾ ಎರಡನೇ ಅಲೆಯಲ್ಲಿ ಯುವಕರೇ ಹೆಚ್ಚಾಗಿ ಸೋಂಕಿಗೆ ತುತ್ತಾಗುತ್ತಿದ್ದಾರೆ. ಒಂದನೇ ಹಾಗೂ ಎರಡನೇ ಅಲೆಯಲ್ಲಿ ಜಿಲ್ಲೆಯಲ್ಲಿ ಒಟ್ಟು 687 ಜನರು ಕೋವಿಡ್ಗೆ ಪ್ರಾಣ ಕಳೆದುಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗಿ ದಾಖಲಾಗುತ್ತಿಲ್ಲ. ಬದಲಾಗಿ ಅವಳಿ ನಗರದಲ್ಲೇ ಶೇ 80ರಷ್ಟು ಜನರಿಗೆ ಕೊರೊನಾ ವಕ್ಕರಿಸುತ್ತಿದ್ದು, ಸಾವಿನ ಸಂಖ್ಯೆಯೂ ಏರುಗತಿಯಲ್ಲಿ ಸಾಗಿದೆ.
ಈ ಕುರಿತು ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಸರ್ಕಾರದ ಆದೇಶದ ಪ್ರಕಾರ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಮುಖ್ಯವಾಗಿ ವ್ಯಾಪಾರಸ್ಥರು ಹಾಗೂ ಗ್ರಾಹಕರು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ವ್ಯವಹರಿಸಬೇಕು. ಯಾವಾಗ, ಯಾರಿಗೆ ಏನಾಗುತ್ತೋ ಗೊತ್ತಿಲ್ಲ. ಹೀಗಾಗಿ, ಎಲ್ಲರೂ ಕೋವಿಡ್ ನಿಯಮ ಪಾಲಿಸಬೇಕು. ಸರ್ಕಾರ ಯಾವ ಕ್ರಮ ಕೈಗೊಳ್ಳಬೇಕೋ, ಅದನ್ನು ಕೈಗೊಳ್ಳುತ್ತದೆ ಎಂದರು.
ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಈ ಬಾರಿ ಯುವಕರಿಗೆ ಹೆಚ್ಚಾಗಿ ಸೋಂಕು ತಗಲುತ್ತಿದೆ. ಕಿಮ್ಸ್ನಲ್ಲಿ ಎಲ್ಲಾ ಸಿದ್ಧತೆ ಕೈಗೊಂಡಿದ್ದು, ಆಕ್ಸಿಜನ್ ಕೊರತೆಯಿಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಕೋವಿಡ್ ನಿಯಂತ್ರಣ ವಿಚಾರದಲ್ಲಿ ರಾಜ್ಯಗಳತ್ತ ಗಮನಹರಿಸಿ : ಪ್ರಧಾನಿಗೆ ಸಿದ್ದರಾಮಯ್ಯ ಮನವಿ