ಧಾರವಾಡ: ಗ್ರಾಮ ಮಟ್ಟದಲ್ಲಿ ಕೋವಿಡ್ ಕಾಳಜಿ ಕೇಂದ್ರ ಆರಂಭಿಸಲು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಜಿಲ್ಲಾಧಿಕಾರಿ ನಿತೇಶ ಪಾಟೀಲ ಸೂಚನೆ ನೀಡಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ ಕಲಂ 26ರನ್ವಯ ಅಧಿಕಾರ ಚಲಾಯಿಸಿ, ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗೆ ಗ್ರಾಮಮಟ್ಟದಲ್ಲಿ ಕೇಂದ್ರ ಆರಂಭಿಸಲು ಅನುಮತಿ ನೀಡಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗ್ರಾಮ ಪಂಚಾಯತ್ ಹಾಗೂ ಗ್ರಾಮಗಳ ಮಟ್ಟದಲ್ಲಿ ಅವಶ್ಯವಿದ್ದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ಕ್ರಮ ಕೈಗೊಳ್ಳಬಹುದು. ಮತ್ತು ಕೋವಿಡ್ ಕೇರ್ ಸೆಂಟರ್ಗಳಲ್ಲಿ ದಾಖಲಾಗುವವರಿಗೆ ಉಚಿತವಾಗಿ ಊಟ ಪೂರೈಸಲಾಗುವುದು. ಇದಕ್ಕೆ ಸಂಬಂಧಪಟ್ಟ ವೆಚ್ಚವನ್ನು ಮತ್ತು ಇತರೆ ಸೌಲಭ್ಯಗಳನ್ನು ಪೂರೈಸಲು 1000 ರೂ.ಗಳನ್ನು ಎಸ್.ಡಿ.ಆರ್.ಎಫ್. ಅಡಿ ವಿತರಿಸಲಾಗುವುದು ಎಂದು ತಿಳಿಸಿದ್ದಾರೆ.
ಗ್ರಾಮ ಮಟ್ಟದಲ್ಲಿನ ಆಶಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಮೂಲಕ ಕೋವಿಡ್ ಕೇರ್ ಸೆಂಟರ್ನಲ್ಲಿರುವ ಸೋಂಕಿತರ ಆರೋಗ್ಯವನ್ನು ಕಾಲಕಾಲಕ್ಕೆ ತಪಾಸಣೆ ಮಾಡಬೇಕು. ಕೋವಿಡ್ ಸೋಂಕಿತರಲ್ಲಿ ಆರೋಗ್ಯ ಸಮಸ್ಯೆ ಉಲ್ಬಣಿಸಿದರೆ ತಾಲೂಕು ಆರೋಗ್ಯ ಅಧಿಕಾರಿ, ಪ್ರಾಥಮಿಕ ಆರೋಗ್ಯ ಕೇಂದ್ರದ ಅಧಿಕಾರಿಗಳ ಮೂಲಕ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.