ಹುಬ್ಬಳ್ಳಿ: ಸಾರಿಗೆ ಸೇವೆ ಒದಗಿಸುತ್ತಿರುವ ವಾಕರಸಾ ಸಂಸ್ಥೆಯು 2,000ಕ್ಕೂ ಹೆಚ್ಚಿನ ನೌಕರರ ಅನುಕೂಲಕ್ಕಾಗಿ ಹುಬ್ಬಳ್ಳಿ ವಿಭಾಗದ ಎಲ್ಲಾ ಘಟಕಗಳಲ್ಲಿ ಶುದ್ಧ ಕುಡಿಯುವ ನೀರಿನ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಇಲ್ಲಿನ ಗ್ರಾಮಾಂತರ 1ನೇ ಘಟಕದಲ್ಲಿ ಶುದ್ಧ ಕುಡಿಯುವ ನೀರಿನ ಕೇಂದ್ರಕ್ಕೆ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಹಲವಾರು ಕಾಯಿಲೆಗಳು ಅಶುದ್ಧ ನೀರಿನ ಮೂಲಕ ಬರುತ್ತವೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಶುದ್ಧ ಕುಡಿಯುವ ನೀರಿನ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಸಾರಿಗೆ ಸಿಬ್ಬಂದಿ ಅದರಲ್ಲೂ ಮುಖ್ಯವಾಗಿ ಚಾಲಕರು ಮತ್ತು ನಿರ್ವಾಹಕರು ಕರ್ತವ್ಯದ ಸಮಯದಲ್ಲಿ ನಿತ್ಯವೂ ಜನರ ಸಂಪರ್ಕಕ್ಕೆ ಬರುವ ಅನಿವಾರ್ಯತೆ ಇರುತ್ತದೆ. ಆದ್ದರಿಂದ ತಪ್ಪದೇ ಎಲ್ಲಾ ಸುರಕ್ಷಿತ ಕ್ರಮಗಳನ್ನು ಅನುಸರಿಸಬೇಕು.
ಕೊರೊನಾ ಲಕ್ಷಣಗಳು ಕಾಣಿಸಿಕೊಂಡರೆ ನಿರ್ಲಕ್ಷ್ಯ ಮಾಡದೆ ಕೂಡಲೆ ಪರೀಕ್ಷೆ ಮಾಡಿಸಿಕೊಳ್ಳಬೇಕು. ಒಂದು ವೇಳೆ ಸೋಂಕು ದೃಢಪಟ್ಟರೆ ಧೃತಿಗೆಡದೆ ನಿಗದಿತ ಕೋವಿಡ್ ಚಿಕಿತ್ಸಾ ಕೇಂದ್ರಗಳಲ್ಲಿ ದಾಖಲಾಗಿ ಅಗತ್ಯ ಚಿಕಿತ್ಸೆ ಪಡೆಯಬೇಕು. ಈ ನಿಟ್ಟಿನಲ್ಲಿ ಸಂಸ್ಥೆ ವತಿಯಿಂದ ಎಲ್ಲ ರೀತಿಯ ನೆರವು ನೀಡಲಾಗುವುದು ಎಂದು ಅವರು ಹೇಳಿದರು.
ಈ ವೇಳೆ ವಿಭಾಗೀಯ ಸಂಚಾರ ಅಧಿಕಾರಿ ಅಶೋಕ ಪಾಟೀಲ್, ಕಾರ್ಮಿಕ ಕಲ್ಯಾಣ ಅಧಿಕಾರಿ ನಾಗಮಣಿ ಭೋವಿ, ಉಗ್ರಾಣ ಅಧಿಕಾರಿ ಹೊಸಮನಿ, ಘಟಕ ವ್ಯವಸ್ಥಾಪಕ ಸದಾನಂದ ಒಡೆಯರ, ಸಂಚಾರ ಅಧೀಕ್ಷಕ ಮುನ್ನಾಸಾಬ್ ಇನ್ನಿತರರು ಇದ್ದರು.