ಹುಬ್ಬಳ್ಳಿ : ಹೊಸ ವರ್ಷ ಸಂಭ್ರಮಾಚರಣೆಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಖಾಸಗಿ ಹೋಟೆಲ್ಗಳು ನವಧುವಿನಂತೆ ಶೃಂಗಾರಗೊಳ್ಳುತ್ತಿದ್ದವು. ಜಗಮಗಿಸುವ ಲೈಟಿಂಗ್, ಡಿಜೆ ಸೌಂಡ್ಗೆ ಯುವಕರು ಸ್ಟೆಪ್ ಹಾಕಿ ಸಂಭ್ರಮಿಸುತ್ತಿದ್ದರು. ಆದರೆ, ಕೊರೊನಾ ಹಾಗೂ ಒಮಿಕ್ರಾನ್ ಭೀತಿ ಹಿನ್ನೆಲೆ ಈ ಬಾರಿಯೂ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.
ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೇ ನಿಯಮ ಉಲ್ಲಂಘನೆ ಮಾಡಿದರೆ ಅವರ ವಿರುದ್ಧ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದೆ. ಎಂದಿನಂತೆ ರಾತ್ರಿ 10 ಗಂಟೆಗೆ ಎಲ್ಲವೂ ಬಂದ್ ಆಗಬೇಕು. ಡಿಜೆ, ಸಾಮೂಹಿಕ ಪಾರ್ಟಿ ನಡೆಸುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.
ನಗರದಲ್ಲಿ ಹೊಸ ವರ್ಷಾಚರಣೆ ಹಿನ್ನೆಲೆ ಹು-ಧಾ ಪೊಲೀಸ್ ಆಯುಕ್ತ ಲಾಬೂರಾಮ್ ಅವರ ನಿರ್ದೇಶನದಲ್ಲಿ ಬಿಗಿ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಸಾಮೂಹಿಕ ಆಚರಣೆ ಮಾಡದಂತೆ ಈಗಾಗಲೇ ಸೂಚನೆ ನೀಡಲಾಗಿದೆ. ಸರ್ಕಾರದ ಮಾರ್ಗಸೂಚಿಗಳನ್ನ ಪಾಲನೆ ಮಾಡಲು ಹೋಟೆಲ್ ಮಾಲೀಕರಿಗೆ ಸೂಚಿಸಲಾಗಿದೆ.
ಈ ಸಾರಿ ಧಾರವಾಡ ಜಿಲ್ಲೆಯಲ್ಲಿಯೂ ಯಾವುದೇ ಸಂಭ್ರಮಾಚರಣೆ ಇಲ್ಲ. ನೈಟ್ ಕರ್ಫ್ಯೂ ಜಾರಿಯಲ್ಲಿರುವುದರಿಂದ ಎಂದಿನಂತೆ ರಾತ್ರಿ 10ರವರೆಗೆ ಮಾತ್ರ ತಾರಾ ಹೋಟೆಲ್ಗಳು ಓಪನ್ ಇರಲಿದ್ದು, ಸಾಮೂಹಿಕ ಸಂಭ್ರಮಾಚರಣೆಗೆ ಬ್ರೇಕ್ ಹಾಕಲಾಗಿದೆ.