ಹುಬ್ಬಳ್ಳಿ: ಮಹದಾಯಿ ಮತ್ತು ಕಳಸಾ- ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೂಡಲೇ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ರಾಜ್ಯಕ್ಕೆ ಮಂಜೂರಾದ ನೀರು ಬಳಸಿಕೊಳ್ಳಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರೈತ ಸೇನಾ ಅಧ್ಯಕ್ಷ ವೀರೇಶ ಸೊಬರದಮಠ ಒತ್ತಾಯಿಸಿದರು.
ಸುಪ್ರೀಂ ಕೋರ್ಟ್‌ಗೆ ಈ ಕುರಿತು ಪಿಐಎಲ್ ಸಲ್ಲಿಸಲಾಗಿದ್ದು, ಕುಡಿಯುವ ನೀರು ಕೊಡುವಂತೆ ಫೆಬ್ರುವರಿಯಲ್ಲಿ ದೆಹಲಿ ಚಲೋ ನಡೆಸುತ್ತೇವೆ. ಇದೇ ವೇಳೆ ದಯಾ ಮರಣ ಕೋರಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸುತ್ತೇವೆ. ರಾಜಕಾರಣಿಗಳ ಮೇಲೆ ರೈತರಿಗೆ ವಿಶ್ವಾಸ ಹೋಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳು ಮಹದಾಯಿ ವಿಚಾರದಲ್ಲಿ ರಾಜಕೀಯ ಮಾಡುತ್ತಿವೆ. ಕೇಂದ್ರ ಮಂತ್ರಿಗಳು, ಜನಪ್ರತಿನಿಧಿಗಳು ರೈತರ ದಾರಿ ತಪ್ಪಿಸುತ್ತಿದ್ದಾರೆ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಅತಿವೃಷ್ಟಿ, ಅನಾವೃಷ್ಟಿಯಿಂದ ರೈತರು ಕಂಗಾಲಾಗಿದ್ದೇವೆ. ಅಲ್ಲದೇ ಕಷ್ಟಪಟ್ಟು ಬೆಳೆದ ಹಿಂಗಾರು ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ದಲ್ಲಾಳಿಗಳು ಮತ್ತು ಅಧಿಕಾರಿಗಳು ಹೊಂದಾಣಿಕೆ ಮಾಡಿಕೊಂಡು ರೈತರಿಗೆ ದ್ರೋಹ ಮಾಡುತ್ತಿದ್ದಾರೆ. ಕಡಲೆ, ಜೋಳ, ಗೋಧಿ, ಕುಸುಬಿ, ಸೂರ್ಯಕಾಂತಿ, ಗೋವಿನಜೋಳಕ್ಕೆ ವೈಜ್ಞಾನಿಕ ಬೆಲೆ ನಿಗದಿಪಡಿಸಬೇಕು. ಕೇಂದ್ರ ಸರ್ಕಾರ ಘೋಷಿಸಿರುವ ಬೆಂಬಲ ಬೆಲೆಗೆ ರಾಜ್ಯ ಸರ್ಕಾರ ಹೆಚ್ಚುವರಿ ದರ ನಿಗದಿಪಡಿಸಬೇಕು. ರಾಜ್ಯ ಸರ್ಕಾರ ಕೂಡಲೇ ಖರೀದಿ ಕೇಂದ್ರಗಳನ್ನು ಪ್ರಾರಂಭಿಸಬೇಕು. ಇಲ್ಲದಿದ್ದರೆ ಜನವರಿ 27ರಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ನಿರಂತರ ಧರಣಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.