ಹುಬ್ಬಳ್ಳಿ: ಸರ್ಕಾರಿ ಕಚೇರಿಯ ಸಿಬ್ಬಂದಿ ಕಡ್ಡಾಯವಾಗಿ ಎರಡೂ ಡೋಸ್ ಲಸಿಕೆ ಪಡೆದುಕೊಂಡೇ ಕಚೇರಿಗೆ ಹಾಜರಾಗಬೇಕೆಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ಹೇಳಿದರು. ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಮುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಈ ಬಗ್ಗೆ ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.
ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳ ಸಿಬ್ಬಂದಿಗೂ ಈ ಮಾರ್ಗಸೂಚಿ ಪಾಲಿಸಲು ತಿಳಿಸಲಾಗುವುದು, ಬೂಸ್ಟರ್ ಡೋಸ್ ಅನ್ನು ಜನವರಿ 10ರ ನಂತರ ನೀಡಲಾಗುವುದು. ಆರಂಭದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಮತ್ತು ವಯೋಸಹಜ ಕಾಯಿಲೆಗಳಿರುವ ಅರವತ್ತು ವರ್ಷ ಮೇಲ್ಪಟ್ಟವರಿಗೆ ಮಾತ್ರ ನೀಡಲಾಗುವುದು ಎಂದರು.
ಹದಿನೈದರಿಂದ ಹದಿನೆಂಟು ವರ್ಷದ ಮಕ್ಕಳಿಗೆ ಜನವರಿ 3ರಿಂದ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುವುದು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಲಸಿಕೆಗೆ ಚಾಲನೆ ನೀಡಲಿದ್ದಾರೆ. ಸಚಿವರು ಹಾಗೂ ಶಾಸಕರು ಸಹ ಸ್ಥಳೀಯವಾಗಿ ಮಕ್ಕಳ ಲಸಿಕೆಗೆ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಕೆ. ಸುಧಾಕರ್ ತಿಳಿಸಿದರು.
ಈಗಾಗಲೇ ಒಮಿಕ್ರಾನ್ ತಡೆಗಾಗಿ ಇಂದಿನಿಂದ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸೋಂಕು ಹರಡುವಿಕೆ ಆಧರಿಸಿ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಲಾಗುವುದು. ಜನರೂ ಸೋಂಕು ನಿಯಂತ್ರಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಾಗ್ತಿರುವ ಒಮಿಕ್ರಾನ್ ಕೇಸ್.. ನಾಳೆಯಿಂದ ಮನೆ ಮನೆಗೆ ತೆರಳಿ ಆರೋಗ್ಯ ಸರ್ವೇಗೆ ಆದೇಶ