ಹುಬ್ಬಳ್ಳಿ (ಧಾರವಾಡ): ಪ್ರಾರ್ಥನಾ ಸ್ಥಳವೊಂದರ ಮೇಲೆ ಧ್ವಜವೊಂದನ್ನು ಹಾರಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ಆವರಣದಲ್ಲಿ ಕಲ್ಲು ತೂರಾಟ ನಡೆದಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದ್ದು, ಪೊಲೀಸರು ಪಥ ಸಂಚಲನ ನಡೆಸಿದ್ದಾರೆ.
ಯುವಕನೊಬ್ಬ ಹರಿಬಿಟ್ಟ ವಿಡಿಯೋ ಹುಬ್ಬಳ್ಳಿಯಲ್ಲಿ ಅಶಾಂತಿಯ ವಾತಾವರಣ ನಿರ್ಮಿಸಿದೆ. ಈ ಹಿನ್ನೆಲೆಯಲ್ಲಿ ಹು-ಧಾ ಪೊಲೀಸ್ ಕಮಿಷನರೇಟ್ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ನಗರದ ಆಯಕಟ್ಟಿನ ಪ್ರದೇಶಗಳಾದ ಬಂಕಾಪೂರ ಚೌಕ್, ನ್ಯೂ ಇಂಗ್ಲಿಷ್ ಸ್ಕೂಲ್, ಕಮರಿಪೇಟೆ ಸೇರಿದಂತೆ ಹಳೇ ಹುಬ್ಬಳ್ಳಿಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಪಥ ಸಂಚಲನ ನಡೆಸಿದರು.