ಹುಬ್ಬಳ್ಳಿ : ಬಿಜೆಪಿ ಸರ್ಕಾರ ಇನ್ನೂ ಮೂರು ವರ್ಷಗಳ ಕಾಲ ಅಧಿಕಾರ ನಡೆಸಲಿದ್ದು, ಮುಂಬರುವ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ಮತ್ತೆ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿಂದು ಆಯೋಜಿಸಲಾಗಿದ್ದ ಪೌರತ್ವ (ತಿದ್ದುಪಡಿ) ಕಾಯ್ದೆ ಜನಜಾಗೃತಿ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವನ್ನು ಸಂಘಟನೆ ಮಾಡಬೇಕು. ಈ ಹಿನ್ನೆಲೆಯಲ್ಲಿ ರಾಜ್ಯದ ಪ್ರವಾಸ ಕೈಗೊಂಡಿರುವ ಅಮಿತ್ ಶಾ ಮತ್ತು ಮೋದಿ ಕೈ ಬಲ ಪಡಿಸಬೇಕಿದೆ ಎಂದರು.
ಮಾರ್ಚ್ 5ರಂದು ಜನಪರ ಬಜೆಟ್ ಮಂಡನೆ ಮಾಡುತ್ತೇವೆ. ರೈತರು, ಕೂಲಿ ಕಾರ್ಮಿಕರು ಹಾಗೂ ನೀರಾವರಿ ಯೋಜನೆಗಳನ್ನು ಗಮನದಲ್ಲಿಟ್ಟುಕೊಂಡು ಬಜೆಟ್ ರೂಪಿಸಿ ರಾಜ್ಯವನ್ನು ಮಾದರಿ ರಾಜ್ಯವನ್ನಾಗಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.