ಹುಬ್ಬಳ್ಳಿ: ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ ಕೈಪಿಡಿಯಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನ ರಚಿಸಿಲ್ಲ ಎಂಬ ವಿವಾದ ಹುಟ್ಟು ಹಾಕಿದ್ದು, ಕೂಡಲೇ ಶಿಕ್ಷಣ ಇಲಾಖೆಯ ನಿರ್ದೇಶಕರನ್ನು ಮತ್ತು ಆಯುಕ್ತರನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಜೈಭೀಮ ಅಖಿಲ ಭಾರತ ದಲಿತ ಸಂಘಟನೆಯ ಕಾರ್ಯಕರ್ತರು ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿದ್ರು.
ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ದೇಶದ ಪ್ರಜಾಪ್ರಭುತ್ವಕ್ಕೆ ಹಾಗೂ ದೇಶದ ಪವಿತ್ರ ಸಂವಿಧಾನಕ್ಕೆ ಮಾಡುವ ಅವಮಾನವಾಗಿದೆ. ಅಲ್ಲದೇ ಶಿಕ್ಷಣ ಇಲಾಖೆಯ ಸುತ್ತೋಲೆಯ ಕೈಪಿಡಿಯಲ್ಲಿ ಅಂಬೇಡ್ಕರ್ ಅವರು ಸಂವಿಧಾನ ರಚನೆ ಮಾಡಿಲ್ಲ ಎಂದು ಹೇಳುವುದು ಸರಿಯಲ್ಲ. ಇಂತಹ ವಿವಾದಾತ್ಮಕ ನಿರ್ಧಾರವನ್ನು ಕೈಬಿಟ್ಟು ಕೂಡಲೇ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಇನ್ನು, ತಹಶೀಲ್ದಾರರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಕೂಡಲೇ ಸೂಕ್ತ ಕ್ರಮಕೈಗೊಳ್ಳಬೇಕು, ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ರು.