ಹುಬ್ಬಳ್ಳಿ: ಕಳೆದ ವರ್ಷ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದಾಗಿ ಮನೆ ಹಾಗೂ ಬೆಳೆ ಕಳೆದುಕೊಂಡವರಿಗೆ ಪರಿಹಾರ ನೀಡುವುದರಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಕಳಸಾ ಬಂಡೂರಿ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕಳೆದ ಬಾರಿ ಸತತ ಮಳೆ ಸುರಿದ ಪರಿಣಾಮ ರೈತರು ಬೆಳೆ ಹಾಗೂ ಮನೆಗಳನ್ನು ಕಳೆದುಕೊಂಡಿದ್ದರು. ಆ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು. ಆದರೆ, ಪಲಾನುಭವಿಗಳಿಗೆ ಬರಬೇಕಾದ ಪರಿಹಾರ ಇನ್ನೂ ಅವರ ಕೈಸೇರಿಲ್ಲ. ಹೀಗಾಗಿ ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಇನ್ನು, ಈ ಬಾರಿಯೂ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಇದರಿಂದಾಗಿ ಉತ್ತರ ಕರ್ನಾಟಕದ ಭಾಗದ ಜನರು ಮತ್ತೆ ಆತಂಕದಲ್ಲಿ ಜೀವನ ನಡೆಸುತ್ತಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.