ಹುಬ್ಬಳ್ಳಿ: ಮತ್ತೊಮ್ಮೆ ಸಂಪೂರ್ಣ ಲಾಕ್‌ಡೌನ್ ಘೋಷಣೆ ಮಾಡುವ ಯೋಜನೆ ಇಲ್ಲ. ಕೊರೊನಾ ಪತ್ತೆಯಾಗುವ ಪ್ರದೇಶಗಳನ್ನು ಮಾತ್ರ ಸೀಲ್ ಡೌನ್ ಮಾಡಲಾಗುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪರಿಸ್ಥಿತಿಗೆ ತಕ್ಕಂತೆ ಸ್ಥಳೀಯ ಮಟ್ಟದಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲಾಗುವುದು. ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆ ನೀಡುವ ಕುರಿತು ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದರು.
ಜಿಲ್ಲೆಯಲ್ಲಿ ವೈದ್ಯರಿಗೂ ಸೋಂಕು ದೃಢಪಟ್ಟ ಬಗ್ಗೆ ಮಾತನಾಡಿದ ಅವರು, ಸೋಂಕು ತಗುಲಿರುವ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಕೂಡಲೇ ಎಲ್ಲಾ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿದ್ದು, ಹೊರ ರಾಜ್ಯದಿಂದ ಬಂದವರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ದೇಶದೆಲ್ಲೆಡೆ ಕೊರೊನಾ ಹೆಚ್ಚಾಗುತ್ತಿದೆ. ಧಾರವಾಡ ಜಿಲ್ಲೆಯಲ್ಲಿ ಪ್ರಕರಣ ಕಡಿಮೆ ಇತ್ತು. ಆದರೆ ಹೊರ ರಾಜ್ಯಗಳಿಂದ ಬಂದವರಿಂದ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ ಎಂದರು.
ಹುಬ್ಬಳ್ಳಿ-ಅಂಕೋಲಾ ರೈಲ್ವೆ ಯೋಜನೆ ಕುರಿತು ಮಾತನಾಡಿದ ಅವರು, ರೈಲ್ವೆ ಯೋಜನೆ ಜಾರಿಗೆ ಪ್ರಯತ್ನಿಸುತ್ತಿದ್ದೇವೆ. ಯೋಜನೆ ಜಾರಿಯಾದರೆ ಗೂಡ್ಸ್ ಮತ್ತು ಪ್ಯಾಸೆಂಜರ್ ರೈಲುಗಳು ಸಂಚರಿಸಲಿವೆ ಎಂದರು.