ಹುಬ್ಬಳ್ಳಿ : ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 146 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಗಲಭೆ ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದ್ದಾರೆ.
ಹಳೇ ಹುಬ್ಬಳ್ಳಿಯ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಪ್ರಕರಣ ಈಗ ತನಿಖೆ ಹಂತದಲ್ಲಿದೆ. ಈತನಕ ಸುಮಾರು 146 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಹಲವು ಮಂದಿ ಕ್ರಿಮಿನಲ್ ಹಿನ್ನೆಲೆಯವರು ಇದ್ದಾರೆ. ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಬಂಧಿತರಲ್ಲಿ ಇಬ್ಬರು ರೌಡಿಶೀಟರ್‌ಗಳಿದ್ದಾರೆ. ಉಳಿದ ಬಂಧಿತ ಆರೋಪಿಗಳ ಹಿನ್ನೆಲೆಯನ್ನು ಪತ್ತೆ ಮಾಡಿ ಕಾನೂನು ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುವುದಾಗಿ ಹೇಳಿದರು. ಯಾವುದೇ ರಾಜಕೀಯ ಪಕ್ಷಗಳ ಮುಖಂಡರ ಮಕ್ಕಳು, ಯಾರೇ ಕ್ರಿಮಿನಲ್ ಚಟುವಟಿಕೆಗಳಿಗೆ ಕೈ ಜೋಡಿಸಿದರೂ ಅವರ ವಿರುದ್ಧವೂ ಸೂಕ್ತ ಕ್ರಮಗಳನ್ನು ಜರುಗಿಸಲಾಗುತ್ತದೆ ಎಂದು ಹೇಳಿದ್ದಾರೆ.
ಪ್ರಕರಣ ಸಂಬಂಧ ಒಬ್ಬ ಕಾರ್ಪೊರೇಟರನ್ನು ಬಂಧಿಸಲಾಗಿದೆ. ಈ ಬಗ್ಗೆ ಇನ್ನಷ್ಟು ತನಿಖೆ ಮಾಡಿ ಗಲಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಅಂತವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದಾಗಿ ಪೊಲೀಸ್ ಆಯುಕ್ತ ಲಾಬೂರಾಮ್ ಹೇಳಿದ್ದಾರೆ.