ಹುಬ್ಬಳ್ಳಿ: ಗೃಹ ಸಚಿವ ಬಸವರಾಜ ಬೊಮ್ಮಾಯಿ ಭೇಟಿ ಬೆನ್ನಲ್ಲೇ ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಸಿಎಂ ರೇಸ್ನಲ್ಲಿ ಪ್ರಹ್ಲಾದ್ ಜೋಶಿ ಹೆಸರು ಪ್ರಮುಖವಾಗಿ ಕೇಳಿ ಬರ್ತಿದೆ. ನಿನ್ನೆ ರಾತ್ರಿಯಷ್ಟೇ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಜೋಶಿ ಭೇಟಿಯಾಗಿದ್ದರು. ಇಂದು ಬೆಳಿಗ್ಗೆ ಹೆಬಸೂರು ಭವನದಲ್ಲಿ ಆರ್.ಎಸ್.ಎಸ್. ಆಯೋಜಿಸಿದ್ದ ಗುರು ಪೂರ್ಣಿಮಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ನಂತರ ನೇರವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಜೋಶಿ, ಮಳೆಯಿಂದಾಗಿ ಉತ್ತರ ಕರ್ನಾಟಕದಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ನಿನ್ನೆ ಧಾರವಾಡ ಜಿಲ್ಲೆಯ ವಿವಿಧೆಡೆ ಹಾನಿಯ ಪರಿಶೀಲನೆ ಮಾಡಿದ್ದೇನೆ. ಈ ಕುರಿತು ಗೃಹ ಸಚಿವ ಬೊಮ್ಮಾಯಿ ಅವರು ಮಾಹಿತಿ ನೀಡಿದ್ದಾರೆ. ಇದೆಲ್ಲವನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಹೆಚ್ಚಿನ ನೆರವು ದೊರಕಿಸಿಕೊಡಲು ಪ್ರಯತ್ನಿಸಲಾಗುವುದು ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.