ಧಾರವಾಡ: ಲಕ್ಷಣ ರಹಿತರು ಹಾಗೂ ಸೌಮ್ಯ ಲಕ್ಷಣಗಳನ್ನು ಹೊಂದಿರುವ ಕೊರೊನಾ ಸೋಂಕಿತರನ್ನು ಹೋಂ ಐಸೋಲೇಷನ್ಗೆ ಶಿಫಾರಸ್ಸು ಮಾಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ ಯೋಜನೆಯಡಿ ಕೋವಿಡ್ ಚಿಕಿತ್ಸೆಗೆ ಮೊದಲ ಆದ್ಯತೆ ನೀಡಬೇಕು. ಯಾವುದೇ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆಯಾಗದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಹೇಳಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, ಖಾಸಗಿ ಆಸ್ಪತ್ರೆಗಳು ಎಬಿಎಆರ್ಕೆ ಅಡಿ ಶಿಫಾರಸ್ಸು ಮಾಡಲ್ಪಟ್ಟ ರೋಗಿಗಳನ್ನು ದಾಖಲಿಸಿಕೊಳ್ಳಲು ನಿರಾಕರಿಸಿದರೆ, ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಕ್ರಮ ಜರುಗಿಸಲಾಗುವುದು. ಜಿಲ್ಲೆಯ ಯಾವುದೇ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಕ್ಸಿಜನ್ ಕೊರತೆಯಾಗದಂತೆ ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು.
ಕೋವಿಡ್ ತಪಾಸಣೆಯ ಪ್ರಮಾಣವನ್ನು ಇನ್ನಷ್ಟು ಹೆಚ್ಚಿಸಬೇಕು. ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಒದಗಿಸಿರುವ ಹಾಸಿಗೆಗಳ ಸಂಖ್ಯೆಯಲ್ಲಿಯೂ ಹೆಚ್ಚಳವಾಗಬೇಕು. ಈಗಾಗಲೇ ನೀಡಿದ ಹಾಸಿಗೆಗಳಲ್ಲಿ ಲಕ್ಷಣರಹಿತರು ಹಾಗೂ ಸೌಮ್ಯ ಲಕ್ಷಣಗಳಿರುವ ಸೋಂಕಿತರು ಇದ್ದರೆ, ತಪಾಸಣೆ ಬಳಿಕ ಅವರನ್ನು ಹೋಂ ಐಸೋಲೇಷನ್ಗೆ ಶಿಫಾರಸ್ಸು ಮಾಡಬೇಕು. ತೀವ್ರ ಚಿಕಿತ್ಸೆ ಅಗತ್ಯವಿರುವ ಸೋಂಕಿತರಿಗೆ ಹಾಸಿಗೆಗಳು ದೊರೆಯುವಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.