ಧಾರವಾಡ: ಭಾರತೀಯ ಸೇನೆಯಲ್ಲಿ 29 ವರ್ಷ ಸೇವೆ ಸಲ್ಲಿಸಿ ಇದೀಗ ನಿವೃತ್ತಿ ಹೊಂದಿ ತವರಿಗೆ ವಾಪಸಾದ ಯೋಧನನ್ನು ಗ್ರಾಮಸ್ಥರು ಹಾಗೂ ಶಾಲಾಮಕ್ಕಳು ಅದ್ಧೂರಿಯಾಗಿ ಬರಮಾಡಿಕೊಂಡರು.
ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದ ವೀರಯೋಧ ಅಶೋಕ ವಿಜಾಪುರ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದರು. ಗ್ರಾಮದ ರೇಣುಕಾ ಯಲ್ಲಮ್ಮನ ದೇವಸ್ಥಾನದಿಂದ ಮಲ್ಲಿಕಾರ್ಜುನ ದೇವಸ್ಥಾನದವರೆಗೆ ನಿವೃತ್ತ ಯೋಧ ಅಶೋಕ್ ಅವರನ್ನು ಮೆರವಣಿಗೆ ಮೂಲಕ ಕರೆತಂದು ಸನ್ಮಾನಿಸಲಾಯಿತು.
ಅಶೋಕ ವಿಜಾಪುರ ಅವರು ಸುದೀರ್ಘ 29 ವರ್ಷಗಳ ಕಾಲ ಗಡಿಯಲ್ಲಿ ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಯೋಧನಾಗಿ ದೇಶ ಸೇವೆ ಸಲ್ಲಿಸಿದ್ದಾರೆ. 1993ರಲ್ಲಿ ಬಿಎಸ್‌ಎಫ್ ಸೇರಿದ್ದ ಅಶೋಕ, ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದರು ಎಂಬುದು ವಿಶೇಷ. 29 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಪಶ್ಚಿಮ ಬಂಗಾಳ, ಪಂಜಾಬ್ ಸೇರಿದಂತೆ ಅನೇಕ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರಿಗೆ ಗೌರವ ಸಲ್ಲಿಸುವ ಮೂಲಕ ಗ್ರಾಮಸ್ಥರು ದೇಶಪ್ರೇಮ ಮೆರೆದಿದ್ದಾರೆ.