ಬೆಂಗಳೂರು/ಕಲಬುರಗಿ/ಕೊಪ್ಪಳ: ತೀವ್ರ ವಿರೋಧಕ್ಕೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಇಂದು ರಾಜ್ಯಾದ್ಯಂತ ವಿವಿಧ ಸಂಘಟನೆಗಳಿಂದ ಪ್ರತಿಭಟನೆ ನಡೆಯುವ ಸಾಧ್ಯತೆ ಇದೆ. ಈ ಹಿನ್ನೆಲೆ ವಿವಿಧ ಜಿಲ್ಲೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಇಂದು ಕಲಬುರಗಿ ಬಂದ್: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕಲಬುರಗಿ ಬಂದ್ಗೆ ಕರೆ ನೀಡಲಾಗಿದ್ದು, ಬೆಳಗ್ಗೆ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಂದಿನಂತೆ ಯಥಾಸ್ಥಿತಿಯಲ್ಲಿ ಸಾರಿಗೆ ಬಸ್ಸುಗಳು ರಸ್ತೆಗಿಳಿದಿವೆ. ಆಟೋ ಸಂಚಾರ, ಜನಜೀವನ ಯಥಾಸ್ಥಿತಿ ಮುಂದುವರೆದಿದೆ. ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪೀಪಲ್ಸ್ ಫೋರಂ ಸೇರಿದಂತೆ ಅನೇಕ ಸಂಘಟನೆಗಳು ಜಿಲ್ಲಾ ಬಂದ್ಗೆ ಕರೆ ನೀಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಇಂದು ಬೆಳಗ್ಗೆ 6 ಗಂಟೆಯಿಂದ ಡಿ. 21ರ ರಾತ್ರಿ 10 ಗಂಟೆಯವರೆಗೆ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲೆಡೆ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಈಗಾಗಲೇ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಕೆಪಿಎಸ್ಸಿ ಸೇರಿದಂತೆ ವಿವಿಧ ಹುದ್ದೆಗಳಿಗೆ ನಡೆಯುವ ಲಿಖಿತ ಪರೀಕ್ಷೆಗಳು ಪೂರ್ವನಿಗದಿಯಂತೆ ನಡೆಯಲಿವೆ.
ಕೊಡಗು, ಕೊಪ್ಪಳ, ಚಾಮರಾಜನಗರದಲ್ಲೂ ನಿಷೇಧಾಜ್ಞೆ ಜಾರಿ:
ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ವಿವಿಧ ರಾಜಕೀಯ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಇಂದಿನಿಂದ 2 ದಿನಗಳ ಕಾಲ ಕೊಡಗಿನಲ್ಲಿ ಸೆಕ್ಷನ್ 144 ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಡಳಿತ ಆದೇಶ ನೀಡಿದೆ.
ಕೊಡಗು ಕೂಮು ಸೂಕ್ಷ್ಮ ಪ್ರದೇಶವಾಗಿರುವುದರಿಂದ ಇಂದಿನಿಂದ ಡಿ. 21ರ ಮಧ್ಯರಾತ್ರಿವರೆಗೆ ನಿಷೇಧಾಜ್ಞೆ ಹೊರಡಿಸುವಂತೆ ಎಸ್ಪಿ ಸುಮನ್ ಡಿ. ಪನ್ನೇಕರ್ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ಗೆ ಮನವಿ ಮಾಡಿದ್ದರು. ಮನವಿ ಪುರಸ್ಕರಿಸಿದ ಜಿಲ್ಲಾಧಿಕಾರಿ, ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. ಈ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ನಿಷೇಧಾಜ್ಞೆ ಹಿನ್ನೆಲೆ ಪ್ರತಿಭಟನೆ, ಮೆರವಣಿಗೆ ನಡೆಸುವುದು, ಧಿಕ್ಕಾರ ಕೂಗುವುದು, ಐದಕ್ಕಿಂತ ಹೆಚ್ಚು ಜನರು ಒಂದೆಡೆ ಗುಂಪು ಸೇರುವುದನ್ನು ಮಾಡುವಂತಿಲ್ಲ. ಆದೇಶ ಉಲ್ಲಂಘಿಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಬೆಳಗ್ಗೆ 10 ಗಂಟೆಯ ನಂತರ ಎಡಪಕ್ಷಗಳು ಕೊಪ್ಪಳ ನಗರದಲ್ಲಿ ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಕಲಂ 144 ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾಧಿಕಾರಿ ಪಿ.ಸುನೀಲಕುಮಾರ್ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಇಂದು ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 20ರ ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸಿಎಎ ಮತ್ತು ಎನ್‌ಆರ್‌ಸಿ ಕಾಯ್ದೆಯ ವಿರುದ್ಧ ಕಾಂಗ್ರೆಸ್ ಮತ್ತು ಇತರೆ ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿರುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಗ್ಗೆ 6ರಿಂದ ಚಾಮರಾಜನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹಲವು ಸಂಘಟನೆಗಳು ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಗರದಲ್ಲಿ ಜಾಥಾ ನಡೆಸಿ ಪ್ರತಿಭಟನೆ ನಡೆಸಲು ಕರೆ ನೀಡಿದ್ದು, ಯಾವುದೇ ಆಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಬೆಳಗ್ಗೆ 6ರಿಂದ ಡಿ. 21ರ ಮಧ್ಯರಾತ್ರಿ 10ರವರೆಗೆ ಪೊಲೀಸರ ಮನವಿ ಮೇರೆಗೆ ಜಿಲ್ಲಾಧಿಕಾರಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.