ಕಲಬುರಗಿ: ಚಿಂಚೋಳಿ ಕ್ಷೇತ್ರದಲ್ಲಿ ಒಳ್ಳೆಯ ವಾತಾವರಣವಿದ್ದು, ಉಪಚುನಾವಣೆಯಲ್ಲಿ ಇಪ್ಪತ್ತು ಸಾವಿರ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಗೆಲ್ಲಲಿದ್ದಾರೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಚಿಂಚೋಳಿಯಲ್ಲಿ ಕಾರ್ಯಕರ್ತರ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿಂಚೋಳಿ ಕ್ಷೇತ್ರ ವ್ಯಾಪ್ತಿಯಲ್ಲಿ ನಮ್ಮ ಕಾರ್ಯಕರ್ತರು, ಮುಖಂಡರು ಪ್ರಚಾರ ನಡೆಸಿದ್ದು, ಬಿಜೆಪಿ ಅಭ್ಯರ್ಥಿ ಗೆಲುವು ಖಚಿತ ಎಂದರು.
ಚಿಂಚೋಳಿಯಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಲು ಪ್ರಯತ್ನಿಸಲಾಗುತ್ತಿದೆ ಹಾಗೂ ಕಾಳಗಿ ತಾಲೂಕಿನ ಹಳ್ಳಿಗಳ ಪುನರ್ವಿಂಗಡನೆಯಲ್ಲಿ ಅನ್ಯಾಯವಾಗಿದೆ ಅದನ್ನು ಸರಿಪಡಿಸಲು ಪ್ರಾಮಾಣಿಕ ಪ್ರಯತ್ನ ನಡಿಸಿದ್ದೇನೆ. ಸಮ್ಮಿಶ್ರ ಸರ್ಕಾರದ ಮೇಲೆ ಜನತೆಗೆ ಆಕ್ರೋಶವಿದೆ. ರಾಜ್ಯಾದ್ಯಂತ ಬರಗಾಲವಿದ್ದರೂ ಸರ್ಕಾರ ಸ್ಪಂದಿಸದೆ ಇರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ, ಕುಮಾರಸ್ವಾಮಿ ಜನರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಹಣ ಬಲದಿಂದ ಜಾತಿಯ ವಿಷ ಬೀಜ ಬಿತ್ತಿ ಗೆಲ್ಲಬಹುದೆಂಬ ಭ್ರಮೆಯಲ್ಲಿದ್ದಾರೆ. ಅವರಿಗೆ ಉಪ ಚುನಾವಣೆಯಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಚುನಾವಣೆ ಫಲಿತಾಂಶದ ಬಳಿಕ ಎಲ್ಲವೂ ಬದಲಾವಣೆಯಾಗಲಿದೆ ಎಂದರು.