ಕಲಬುರಗಿ: ಫೆ.05 ರಿಂದ ಮೂರು ದಿನಗಳ ಕಾಲ ನಗರದಲ್ಲಿ ಆಯೋಜಿಸಲಾಗಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯ ಚಟುವಟಿಕೆಗಳಿಗೆ ಚಾಲನೆ ದೊರತಿದ್ದು, ಸಮ್ಮೇಳನದ ಕಚೇರಿಯನ್ನು ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಸಭೆ ಕರೆಯಲಾಗಿತ್ತು. ಸಭೆಯಲ್ಲಿ ವಿವಿಧ ಸಾಹಿತಿಗಳು, ಜನಪ್ರತಿನಿಧಿಗಳು ಹಲವಾರು ಸಲಹೆಗಳನ್ನು ನೀಡಿದರು. ಸಮ್ಮೇಳನಾಧ್ಯಕ್ಷರ ಆಯ್ಕೆ ವಿಷಯದಲ್ಲಿ ಕಲ್ಯಾಣ ಕರ್ನಾಟಕ ಸಾಹಿತಿಗಳನ್ನು ಕಡೆಗಣಿಸಲಾಗಿದೆ ಎಂದು ಕೆಲ ಸಾಹಿತಿಗಳು ಅಸಮಾಧಾನ ವ್ಯಕ್ತಪಡಿಸಿದರು. ಅಲ್ಲದೆ ಇತ್ತೀಚೆಗೆ ನಿಧನರಾದ ಹಿರಿಯ ಸಾಹಿತಿ ಚೆನ್ನಣ್ಣ ವಾಲೀಕಾರ ಅವರ ಹುಟ್ಟೂರಿನಲ್ಲಿ ಸ್ಮಾರಕ ನಿರ್ಮಿಸಬೇಕು. ಸಮ್ಮೇಳನದ ಮುಖ್ಯ ವೇದಿಕೆಗೆ ಅವರ ಹೆಸರಿಡಬೇಕೆಂದು ಸಭೆಯಲ್ಲಿ ಆಗ್ರಹಿಸಲಾಯಿತು.
ಇದೇ ವೇಳೆ ಸಮ್ಮೇಳನದ ಸ್ವಾಗತ ಸಮಿತಿ ಸೇರಿ 16 ಸಮಿತಿಗನ್ನು ಡಿಸಿಎಂ ಪ್ರಕಟಿಸಿದರು. ನಂತರ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಮರುನಾಮಕರಣಗೊಂಡ ನಂತರ ಮೊದಲ ಬಾರಿಗೆ ಕಲಬುರಗಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ಇದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದ್ದು, ಸಮ್ಮೇಳನ ಯಶಸ್ಸಿಗೆ ಕಂಕಣಬದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.
ಇನ್ನೂ ಮೂರು ದಶಕಗಳ ನಂತರ ಕಲಬುರಗಿಗೆ ಅಖಿಲ ಭಾರತ ಸಮ್ಮೇಳನದ ಆತಿಥ್ಯ ಸಿಕ್ಕಿದ್ದು, ಅದರ ಯಶಸ್ಸಿಗೆ ಶ್ರಮಿಸೋದಾಗಿ ಸಾಹಿತಿಗಳು, ಜನಪ್ರತಿನಿಧಿಗಳು ವಿಶ್ವಾಸ ವ್ಯಕ್ತಪಡಿಸಿದರು. ನಾಳೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಸಮ್ಮೇಳನದ ಯಶಸ್ಸಿಗಾಗಿ ವಿಸ್ತೃತ ಚರ್ಚೆ ನಡೆಯಲಿದೆ.