ಕಲಬುರಗಿ: 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಕಲಬುರಗಿಯಲ್ಲಿ ರಾಜ್ಯ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ. ಮುರುಗೇಶ್ ನಿರಾಣಿ ಚಾಲನೆ ನೀಡಿದರು.
ಕಲಬುರಗಿಯ ಆದರ್ಶ ನಗರದಲ್ಲಿರುವ ಆದರ್ಶ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಕ್ಸಿನೇಷನ್ಗೆ ಚಾಲನೆ ನೀಡಿ ಮಾತನಾಡಿದ ಅವರು, 15 ವರ್ಷ ಮೇಲ್ಪಟ್ಟ ಪ್ರತಿಯೊಬ್ಬ ಮಕ್ಕಳು ಕಡ್ಡಾಯವಾಗಿ ಲಸಿಕೆ ಪಡೆಯಬೇಕು. ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಲು ಮುಂದೆ ಬರುವ ಮೂಲಕ ಕೋವಿಡ್ ಸೋಂಕಿನಿಂದ ಮಕ್ಕಳನ್ನು ರಕ್ಷಿಸಬೇಕು ಎಂದು ಕರೆ ನೀಡಿದರು.
ರಾಷ್ಟ್ರದಾದ್ಯಂತ ವಿದ್ಯಾರ್ಥಿಗಳಿಗೆ ಲಸಿಕೆ ವಿತರಣಾ ಕಾರ್ಯಕ್ರಮಕ್ಕೆ ಇಂದು ಚಾಲನೆ ಸಿಕ್ಕಿದ್ದು. ಕಲಬುರಗಿಯಲ್ಲಿ ಒಟ್ಟು 1,55,000 ಜನ ಲಸಿಕೆ ಪಡೆಯಲು ಅರ್ಹರಿದ್ದಾರೆ. ಅವರೆಲ್ಲರಿಗೂ ಲಸಿಕೆ ನೀಡುವಂತೆ ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಗುರಿ ನೀಡಲಾಗಿದೆ ಎಂದು ತಿಳಿಸಿದರು.
ಓಮಿಕ್ರಾನ್ ತಡೆಗೆ ಕ್ರಮ:
ರಾಜ್ಯದಲ್ಲಿ ಒಮಿಕ್ರಾನ್ ಹೆಚ್ಚಾಗದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಸರ್ಕಾರವು ಸಕಲ ಸಿದ್ಧತೆ ಮಾಡಿಕೊಂಡಿದೆ. ಜನ ಈಗಾಗಲೇ ಕೋವಿಡ್ ಒಂದು ಮತ್ತು ಎರಡನೇ ಅಲೆಯಿಂದ ಬಹಳ ಸಮಸ್ಯೆ ಎದುರಿಸಿದ್ದಾರೆ. ಹೀಗಾಗಿ, ಜನರಿಗೆ ತೊಂದರೆ ಆಗದಿರಲೆಂದು ನಿಧಾನಗತಿಯಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೊರೊನಾ ನಿಯಂತ್ರಣಕ್ಕಾಗಿ ಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರು ಪರಿಣಾಮಕಾರ ಕೆಲಸ ಮಾಡುತ್ತಿದ್ದಾರೆ ಎಂದರು.
ಲಾಕ್ಡೌನ್ ಮಾಡುವ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರಸ್ತುತ ಸ್ಥಿತಿಗತಿ ಅಧ್ಯಯನ ಮಾಡಿ, ತಜ್ಞರ ಸಲಹೆಯ ಮೇರೆಗೆ ನಿರ್ಧಾರ ಕೈಗೊಳ್ಳಲಾಗುವುದು. ಕಲಬುರಗಿ ಜಿಲ್ಲೆಯಲ್ಲಿ ಸಹ ಚೆಕ್ ಪೋಸ್ಟ್ ಸೇರಿದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗುವುದು ಎಂದು ಹೇಳಿದರು.
ಈ ಸಂದರ್ಭದಲ್ಲಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್, ಶಾಸಕ ಬಸವರಾಜ ಮುತ್ತಿಮೋಡ, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ್, ಶಶಿಲ್ ನಮೋಶಿ, ಚಂದು ಪಾಟೀಲ್, ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಒ ಡಾ. ದಿಲೀಶ್ ಶಶಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಓದಿ: 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನ: ಸಿಎಂ ಚಾಲನೆ