ಕಲಬುರಗಿ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ಕಲಬುರ್ಗಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ನಗರದ ಎನ್ ವಿ ಮೈದಾನದಲ್ಲಿ ಭರದ ಸಿದ್ಧತೆ ನಡೆಸಲಾಗುತ್ತಿದೆ.
ಪ್ರಧಾನಿ ಮೋದಿ ಕಲಬುರಗಿ ಭೇಟಿ ನಂತರ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನಾಳೆ ಭೇಟಿ ನೀಡುತ್ತಿದ್ದಾರೆ. ಲೋಕಸಭಾ ಚುನಾವಣೆಗೆ ಮೋದಿ ರಣಕಹಳೆ ಮೊಳಗಿಸಿದ ನೂತನ ವಿದ್ಯಾಲಯ ಮೈದಾನದಲ್ಲಿಯೇ ರಾಹುಲ್ ಗಾಂಧಿ ಕಾರ್ಯಕ್ರಮ ಕೂಡಾ ಆಯೋಜಿಸಲಾಗಿದೆ.
ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ನಾಯಕ, ಸೋಲಿಲ್ಲದ ಸರದಾರ ಮಲ್ಲಿಕಾರ್ಜುನ ಖರ್ಗೆ ಪರ ಪ್ರಚಾರ ಮಾಡಲಿದ್ದಾರೆ.
ಕಾರ್ಯಕ್ರಮ ನಡೆಯುವ ನೂತನ ವಿದ್ಯಾಲಯ ಮೈದಾನದಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ವಿಶೇಷ ವಿಮಾನದ ಮೂಲಕ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ರಾಹುಲ್ ಗಾಂಧಿ, ಕಾಂಗ್ರೆಸ್ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಾಳೆ ಮದ್ಯಾಹ್ನ 12:30ಕ್ಕೆ ಕಲಬುರ್ಗಿಗೆ ಆಗಮಿಸಲಿರುವ ರಾಹುಲ್ ಗಾಂಧಿ, 12:40ಕ್ಕೆ ನೂತನ ವಿದ್ಯಾಲಯ ಮೈದಾನಕ್ಕೆ ಬರಲಿದ್ದಾರೆ. ಒಂದು ಗಂಟೆಗಳ ಕಾಲ ಸಮಾವೇಶದಲ್ಲಿ ಭಾಗಿಯಾಗಲಿದ್ದು, ನಂತರ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.