ಕಲಬುರಗಿ: ಕೊರೊನಾ ವೈರಸ್ನಿಂದ ಮೃತಪಟ್ಟ ವೃದ್ಧನೊಂದಿಗೆ ನೇರ ಸಂಪರ್ಕದಲ್ಲಿದ್ದ ನಾಲ್ವರ ಗಂಟಲು ಕಫಾ ಹಾಗೂ ದ್ರವ ಸಂಗ್ರಹಿಸಿ ಲ್ಯಾಬ್ ಪರೀಕ್ಷೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ತಿಳಿಸಿದ್ದಾರೆ.
ಮೃತ ವ್ಯಕ್ತಿಯೊಂದಿಗೆ ಸಂಪರ್ಕ ಹೊಂದಿದ್ದ 46 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಇದರಲ್ಲಿ 31 ಮಂದಿಯನ್ನು ಹೈರಿಸ್ಕ್ ಮತ್ತು 15 ಜನರನ್ನು ಲೋರಿಸ್ಕ್ ಎಂದು ಪರಿಗಣಿಸಿ ಇಎಸ್ಐ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದರು.
ಅಷ್ಟೇ ಅಲ್ಲದೇ ಮೃತ ವ್ಯಕ್ತಿ ಭೇಟಿಯಾಗಿದ್ದ ಎಲ್ಲರನ್ನೂ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಕೆಲವರಿಗೆ ಮನೆಯಲ್ಲಿಯೇ ಚಿಕಿತ್ಸೆ ಮಾಡಲಾಗುತ್ತಿದೆ. ಇಎಸ್ವೈಸಿ ಆಸ್ಪತ್ರೆಯಲ್ಲಿ 200 ಬೆಡ್ ಕ್ವಾರಂಟೆನ್ ವಾರ್ಡ್, 50 ಬೆಡ್ ಐಸೋಲೇಷನ್ ವಾರ್ಡ್ ಸ್ಥಾಪಿಸಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ತಪಾಸಣಾ ಕೇಂದ್ರ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಇತ್ತೀಚಿಗೆ ವಿದೇಶಕ್ಕೆ ಹೋಗಿ ಬಂದವರು ಸ್ವಯಂ ಪ್ರೇರಿತವಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.