ಕಲಬುರಗಿ: ವೀರಶೈವ ಲಿಂಗಾಯತ ಸಮುದಾಯವನ್ನು ಹಿಂದುಳಿದ ವರ್ಗದ ಪಟ್ಟಿಗೆ ಸೇರಿಸುವಂತೆ ನಗರದ ಕನ್ನಡ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಕಾರ್ಯಕರ್ತರೂ ಮೆರವಣಿಗೆಯಲ್ಲಿದ್ದರು. ಈ ಸಂದರ್ಭದಲ್ಲಿ ಎಂ.ಎಸ್.ಪಾಟೀಲ ನರಿಬೋಳ್ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಎಂದು ಘೋಷಣೆ ಕೂಗಿದ್ದಾರೆ. ಘೋಷಣೆ ಕೂಗುತ್ತಿದ್ದಂತೆ ಬಿಜೆಪಿಯ ಮಾಜಿ ಶಾಸಕರು ಹಾಗೂ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ವಿರುದ್ಧ ಧಿಕ್ಕಾರ, ಘೋಷಣೆ ಕೂಗೋದಾದ್ರೆ ನಮ್ಮನ್ನೇಕೆ ಕರೆದಿರಿ ಎಂದು ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ್, ಮಾಜಿ ಎಂಎಲ್ಸಿ ಅಮರನಾಥ ಪಾಟೀಲ ಹಾಗೂ ಕ್ರೇಡಿಲ್ ಅಧ್ಯಕ್ಷ ಚಂದು ಪಾಟೀಲ ಮುಂತಾದವರು ಆಕ್ರೋಶ ಹೊರಹಾಕಿದರು. ಬಿಜೆಪಿ-ಕಾಂಗ್ರೆಸ್ ಎನ್ನುತ್ತಿದ್ದಂತೆ ಸ್ಥಳದಲ್ಲಿದ್ದ ವೀರಶೈವ ಸಮುದಾಯದ ಮುಖಂಡರು ಇಬ್ಬರನ್ನೂ ಸಮಾಧಾನಪಡಿಸಿದರು. ಧಿಕ್ಕಾರ ಕೂಗುವುದಿಲ್ಲ ಎಂದು ಹೇಳಿದ ನಂತರ ಪ್ರತಿಭಟನೆ ಮುಂದುವರಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಇದನ್ನೂ ಓದಿ: ವೀರಶೈವ ಲಿಂಗಾಯತರನ್ನು OBC ಪಟ್ಟಿಗೆ ಸೇರಿಸಲು ಕೇಂದ್ರ ಮುಂದಾಗಲಿ: ಈಶ್ವರ್ ಖಂಡ್ರೆ