ಮಂಗಳೂರು: ನಗರದ ಖಾಸಗಿ ಬಸ್ವೊಂದರಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಗೆ ಸುದ್ದಿಗೋಷ್ಠಿ ವೇಳೆ ಪೊಲೀಸ್ ಕಮಿಷನರ್ ಶಶಿಕುಮಾರ್ ಸಮ್ಮುಖದಲ್ಲಿ ನಡೆದ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತರೊಬ್ಬರು ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದಾರೆ.
ಮಂಗಳೂರಿನ ಸುರತ್ಕಲ್ನ ಜೋಹನ್ ಸಿಕ್ವೇರ ಎಂಬವರು ದ.ಕ ಜಿಲ್ಲಾ ನ್ಯಾಯಾಧೀಶರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದಾರೆ. ಆರೋಪಿಯನ್ನು ಸುದ್ದಿಗೋಷ್ಠಿ ಸಂದರ್ಭದಲ್ಲಿ ಹಾಜರುಪಡಿಸಿದ ವೇಳೆ ಸಂತ್ರಸ್ತೆ ಕಪಾಳಮೋಕ್ಷ ಮಾಡಿರುವುದು ಮಾನವ ಹಕ್ಕುಗಳ ಉಲ್ಲಂಘನೆ ಆಗಿದೆ ಎಂದು ಅವರು ಆಪಾದಿಸಿದ್ದಾರೆ. ಪೊಲೀಸ್ ಕಸ್ಟಡಿ ವೇಳೆ ಆರೋಪಿಯ ಮಾನವ ಹಕ್ಕುಗಳ ಉಲ್ಲಂಘನೆ ಆಗಿದ್ದು, ಈ ಹಿನ್ನೆಲೆಯಲ್ಲಿ ನ್ಯಾಯಾಲಯ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಘಟನೆ ಹಿನ್ನೆಲೆ:
ಮಂಗಳೂರಿನ ಖಾಸಗಿ ಬಸ್ವೊಂದರಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಓರ್ವ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೇರಳದ ಹುಸೈನ್ ಎಂಬ ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿದ್ದು, ಆ ವೇಳೆ ಆರೋಪಿಯನ್ನು ಕರೆ ತರಲಾಗಿತ್ತು. ಈ ಸಂದರ್ಭದಲ್ಲಿ ಸಂತ್ರಸ್ತೆಯೂ ಸಹ ಅಲ್ಲಿಗೆ ಬಂದಿದ್ದು, ಆರೋಪಿಗೆ ಕಪಾಳಮೋಕ್ಷ ಮಾಡಿದ್ದರು.