ಮಂಗಳೂರು: ಭಾರೀ ಮಳೆಯಿಂದ ಗುಡ್ಡ ಕುಸಿದು ಸಂಚಾರ ನಿರ್ಬಂಧಗೊಂಡಿದ್ದ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಅನುಮತಿ ನೀಡಿ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಇಂದು ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ಘಾಟ್‌ನಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದವು. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು-ವಿಲ್ಲಪುರಂ ರಸ್ತೆಯ 76 ಕಿ.ಮೀನಿಂದ 86 ಕಿ.ಮೀ.ವರೆಗಿನ ಮಾರ್ಗದಲ್ಲಿ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಸಾರ್ವಜನಿಕರ ಹಿತದೃಷ್ಟಿಯಿಂದ ಸೆ. 15ರಿಂದ ಲಘು ವಾಹನಗಳಿಗೆ ಮಾತ್ರ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು.
ಇಂದು ಲಘು ವಾಹನಗಳಿಗೆ 24 ಗಂಟೆಯೂ ಸಂಚಾರಕ್ಕೆ ಮುಕ್ತ ಅವಕಾಶವನ್ನು ಜಿಲ್ಲಾಧಿಕಾರಿಯವರು ಕಲ್ಪಿಸಿದ್ದು, ಭಾರೀ ವಾಹನಗಳ ಸಂಚಾರದ ನಿಷೇಧ ಮುಂದುವರೆಸಿದ್ದಾರೆ. ಇದು ಮುಂದಿನ ಆದೇಶದವರೆಗೆ ಜಾರಿಯಲ್ಲಿರುತ್ತದೆ.