ಉಳ್ಳಾಲ: ಕಾಂಗ್ರೆಸ್ ಹಾಗೂ ಎಸ್ಡಿಪಿಐ ಕಾರ್ಯಕರ್ತರ ನಡುವೆ ಹರೇಕಳ ಮತದಾನ ಕೇಂದ್ರದ ಬಳಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಕೊಣಾಜೆ ಠಾಣೆಗೆ ಮುತ್ತಿಗೆ ಹಾಕಿದರು.
ಕಾಂಗ್ರೆಸ್ ಕಾರ್ಯಕರ್ತ ಝಕಾರಿ ಮಲಾರ್ ಎಂಬುವರ ಎಸ್ಡಿಪಿಐ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಹಲ್ಲೆಗೊಳಗಾದ ವ್ಯಕ್ತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಈ ಕುರಿತು ಕೊಣಾಜೆ ಠಾಣೆಯಲ್ಲಿ ಮೂವರು ಎಸ್ಡಿಪಿಐ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿದ್ದರು. ಈ ಹಿನ್ನೆಲೆ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು, ಯು.ಟಿ.ಖಾದರ್ ಹಾಗೂ ಮುಖಂಡರ ನೇತೃತ್ವದಲ್ಲಿ ಕೊಣಾಜೆ ಠಾಣೆಗೆ ನಿನ್ನೆ ರಾತ್ರಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ವೇಳೆ ಮಾತನಾಡಿದ ಕ್ಷೇತ್ರ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಶೆಟ್ಟಿ ಅಸೈಗೋಳಿ, ಬಿಜೆಪಿ ಬೆಂಬಲಿತ ಎಸ್ಡಿಪಿಐ ಕಾರ್ಯಕರ್ತರು ಈ ಕೃತ್ಯ ನಡೆಸಿದ್ದಾರೆ. ಬುಧವಾರ ಸಂಜೆಯೊಳಗೆ ಆರೋಪಿಗಳನ್ನು ಬಂಧಿಸುವ ವಿಶ್ವಾಸವನ್ನು ಠಾಣಾಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಒಂದು ವೇಳೆ ಆರೋಪಿಗಳನ್ನು ಬಂಧಿಸದಿದ್ದರೆ ಕಾಂಗ್ರೆಸ್ ವತಿಯಿಂದ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.