ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸುವಲ್ಲಿ ವಿಫಲವಾದ ಪಂಜಾಬ್ ಸರ್ಕಾರದ ನಡೆಯನ್ನು ಖಂಡಿಸಿ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆ ನಡೆಸಿದರೆ, ಬಿಜೆಪಿ ಪ್ರತಿಭಟನೆಯ ವಿರುದ್ಧ ಕಾಂಗ್ರೆಸ್ಸಿಗರೂ ಹೋರಾಟ ನಡೆಸಿದ ಘಟನೆ ಗುರುವಾರ ನಡೆಯಿತು.
ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಯ ಮುಂಭಾಗ ಏಕಾಏಕಿ ಪ್ರತಿಭಟನೆಗಿಳಿದರು. ಈ ಸಂದರ್ಭ ಕಾಂಗ್ರೆಸ್ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಲು ಆರಂಭಿಸಿ, ಎರಡೂ ಪಕ್ಷಗಳ ನಡುವೆ ವಾಗ್ವಾದ ಆರಂಭವಾಯಿತು. ಎರಡೂ ಕಡೆಗಳಲ್ಲಿ ಪರ ವಿರೋಧ ಘೋಷಣೆಗಳು ತಾರಕಕ್ಕೇರಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿತು.
ಈ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಸಮಾಧಾನ ಮಾಡಲು ಯತ್ನಿಸಿದರೂ ಫಲ ನೀಡಲಿಲ್ಲ. ಈ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ಹಿಂದೆ ದೂಡಿದ್ದಾರೆ. ಇದರಿಂದ ಕೆರಳಿದ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಬಳಿಕ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ಸಮಾಧಾನಿಸಿ ಹಿಂದೆ ಕಳುಹಿಸಿದ್ದಾರೆ.
ಕಾಂಗ್ರೆಸ್ನಿಂದ ಮರು ಪ್ರತಿಭಟನೆ
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಬಿಜೆಪಿ ಪ್ರತಿಭಟನೆಯನ್ನು ಖಂಡಿಸಿ ಕಾಂಗ್ರೆಸ್ನಿಂದ ಬಿಜೆಪಿ ಕಚೇರಿ ಚಲೋ ನಡೆಸಲಾಯಿತು. ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ನೇತೃತ್ವದ ತಂಡ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಲು ಪಾದಯಾತ್ರೆ ಮೂಲಕ ಹೊರಟಿತ್ತು. ಈ ಸಂದರ್ಭ ಪೊಲೀಸರು ದಾರಿ ಮಧ್ಯೆಯೇ ತಡೆ ಒಡ್ಡಿದ್ದಾರೆ.
ಇದರಿಂದ ಕುಪಿತರಾದ ಕಾಂಗ್ರೆಸ್ ಕಾಯಕರ್ತರು ರಸ್ತೆ ಮಧ್ಯೆಯೇ ಕುಳಿತು ಪ್ರತಿಭಟನೆ ನಡೆಸಿದರು. ಆಗ ಸ್ಥಳಕ್ಕೆ ಬಂದ ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್, ಪ್ರತಿಭಟನೆ ಕೈಬಿಡಲು ಮನವಿ ಮಾಡಿದರು. ಇದಕ್ಕೆ ಜಗ್ಗದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಇದನ್ನೂ ಓದಿ: SSLC ಪರೀಕ್ಷಾ ದಿನಾಂಕ ಪ್ರಕಟ.. ಇಲ್ಲಿದೆ ನೋಡಿ ವೇಳಾಪಟ್ಟಿ