ಮಂಗಳೂರು: ಉಳ್ಳಾಲದ ರಾಣಿ ಅಬ್ಬಕ್ಕ ತಾಯ್ನಾಡಿಗಾಗಿ ತನ್ನ ಬದುಕನ್ನೇ ತ್ಯಾಗ ಮಾಡಿದ್ದವರು. ಇಂತಹ ಅಬ್ಬಕ್ಕನ ಹೆಸರಿನಲ್ಲಿ ಭವನವೊಂದನ್ನು ನಿರ್ಮಾಣ ಮಾಡಲು ಯೋಜನೆ ಹಾಕಿಕೊಳ್ಳಲಾಗಿದೆ. ಈ ಅಬ್ಬಕ್ಕ ಭವನದ ಕಾಮಗಾರಿಯು 8 ಕೋಟಿ ರೂ. ವೆಚ್ಚದಲ್ಲಿ ಶೀಘ್ರ ಆರಂಭಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಜಿಲ್ಲಾಡಳಿತ, ಜಿ ಪಂ, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಶ್ರಯದಲ್ಲಿ ಅಸೈಗೋಳಿಯ ಕೇಂದ್ರ ಮೈದಾನದಲ್ಲಿ ಎರಡು ದಿನ ನಡೆದ ಉಳ್ಳಾಲದ ವೀರರಾಣಿ ಅಬ್ಬಕ್ಕ ಉತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಅಬ್ಬಕ್ಕಳ ರಾಷ್ಟ್ರಪ್ರೇಮವನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಸಾಹಿತಿ ಉಷಾ ಪಿ. ರೈ ಹಾಗೂ ಅಂತಾರಾಷ್ಟ್ರೀಯ ಕ್ರೀಡಾಪಟು ಶ್ರೀಮಾ ಪ್ರಿಯದರ್ಶಿನಿ ಅವರಿಗೆ ಅಬ್ಬಕ್ಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್‌ಸಾರ್, ಸಹಾಯಕ ಆಯುಕ್ತ ಮದನ್ ಮೋಹನ್, ಜಿಲ್ಲಾಧಿಕಾರಿ ಸಿಂಧು ಬಿ.ರೂಪೇಶ್, ಅಪರ ಜಿಲ್ಲಾಧಿಕಾರಿ ಎಂ.ಜೆ.ರೂಪಾ ಮೊದಲಾದವರು ಉಪಸ್ಥಿತರಿದ್ದರು.