ಮಂಗಳೂರು: ಬಿಜೆಪಿ ನೇತೃತ್ವದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಾರಿಗೆ ಸುಗ್ರೀವಾಜ್ಞೆ ಜಾರಿಗೆ ತಂದಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕಾರ್ಮಿಕ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ, ದಲಿತ, ಕಾರ್ಮಿಕ ಹಾಗೂ ಜನಪರ ಚಳವಳಿಗಳ ದ.ಕ.ಜಿಲ್ಲಾ ಒಕ್ಕೂಟದಿಂದ ಉಪವಾಸ ಸತ್ಯಾಗ್ರಹ ನಡೆಸಲಾಯಿತು.
ರಾಷ್ಟ್ರವ್ಯಾಪಿ ಪ್ರತಿಭಟನಾ ಉಪವಾಸ ಸತ್ಯಾಗ್ರಹದ ಅನ್ವಯ ನಗರದ ಕುದ್ಮುಲ್ ರಂಗರಾವ್ ಪುರಭವನದ ಮುಂಭಾಗದ ಗಾಂಧಿ ಪಾರ್ಕ್ನಲ್ಲಿರುವ ಗಾಂಧಿ ಪ್ರತಿಮೆಯ ಅಡಿ ಉಪವಾಸ ಸತ್ಯಾಗ್ರಹ ನಡೆಯಿತು.
ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ, ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಪ್ರಧಾನಿ ಮೋದಿ ಅವರು ಹಲವಾರು ರೈತ ವಿರೋಧಿ, ಜನ ವಿರೋಧಿ, ಕಾರ್ಮಿಕ ವಿರೋಧಿ ಕಾನೂನುಗಳನ್ನು ತಂದು ಸಂಸತ್ನಲ್ಲಿ ಪ್ರಜಾಪ್ರಭುತ್ವ ವಿರೋಧಿ ನೀತಿ ಮಸೂದೆಗಳನ್ನಾಗಿ ಮಾಡುವಲ್ಲಿ ಸಫಲರಾಗಿದ್ದಾರೆ. ಇಡೀ ದೇಶದ ಜನತೆ ಅವರ ಈ ಮಸೂದೆಗಳನ್ನು ತಿರಸ್ಕಾರ ಮಾಡುತ್ತಿದೆ. ಜೊತೆಗೆ ರಾಜ್ಯ ಸರ್ಕಾರ ಭೂಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆಗಳನ್ನು ತಿದ್ದುಪಡಿ ಮಾಡಿ ಜನವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಇಂತಹ ಕಾನೂನುಗಳನ್ನು ಅನುಷ್ಠಾನ ಮಾಡಲು ದೇಶದ ರೈತರು, ದಲಿತರು ಕಾರ್ಮಿಕರು ಯಾವುದೇ ಕಾರಣಕ್ಕೂ ಬಿಡೋದಿಲ್ಲ ಎಂದರು.
ರಾಜ್ಯ ಸರ್ಕಾರ ಎಪಿಎಂಸಿ, ವಿದ್ಯುತ್ ಎಲ್ಲವನ್ನೂ ಖಾಸಗೀಕರಣ ಮಾಡಲು ಹೊರಟಿದೆ. ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಕರೆಯ ಮೇರೆಗೆ ಇಂದು ರಾಷ್ಟ್ರಾದ್ಯಂತ ಉಪವಾಸ ಸತ್ಯಾಗ್ರಹದ ಮೂಲಕ ಚಳವಳಿಯನ್ನು ಮತ್ತಷ್ಟು ತೀವ್ರಗೊಳಿಸುವ ಕೆಲಸವನ್ನು ಮಾಡಲಾಗುತ್ತಿದೆ. ಈ ಮೂಲಕ ರಾಜ್ಯ ಹಾಗೂ ಕೇಂದ್ರದ ರೈತ ವಿರೋಧಿ ಹಾಗೂ ಜನ ವಿರೋಧಿ ಮಸೂದೆಗಳನ್ನು ಸಾರಾಸಗಟಾಗಿ ತಳ್ಳಿಹಾಕುವಂತಹ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.