ಮಂಗಳೂರು: ಕಾಶ್ಮೀರ ಫೈಲ್ಸ್ ಸಿನಿಮಾದಿಂದ ಪ್ರೇರಣೆಗೊಂಡು ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆ ಕಾಶ್ಮೀರ ಪಂಡಿತರ ಮಕ್ಕಳಿಗೆ ಉಚಿತ ಶಿಕ್ಷಣದ ಘೋಷಣೆ ಮಾಡಿದೆ. ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅವರು ಈ ಬಗ್ಗೆ ಜಮ್ಮುವಿಗೆ ತೆರಳಿ ಸುದ್ದಿಗೋಷ್ಠಿ ನಡೆಸಿ ಅಲ್ಲಿನ ಜನರಿಗೆ ಈ ವಿಚಾರವನ್ನು ತಿಳಿಸಿದ್ದಾರೆ.
ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ವತಿಯಿಂದ ಕಾಶ್ಮೀರದಲ್ಲಿ ದೌರ್ಜನ್ಯಕ್ಕೊಳಗಾದ ಪಂಡಿತರ ಮಕ್ಕಳಿಗೆ ಉಚಿತ ವಸತಿ ಹಾಗೂ ಶಿಕ್ಷಣ ಘೋಷಿಸಿದೆ. ಆರನೇ ತರಗತಿಯಿಂದ ಪದವಿ ಹಂತದವರೆಗೆ ಯಾವುದೇ ತರಗತಿಯಲ್ಲಿ ಓದಲು ಬಯಸುವ ಕಾಶ್ಮೀರ ಪಂಡಿತರ ಮಕ್ಕಳಿಗೆ ಈ ಉಚಿತ ಸೌಲಭ್ಯ ದೊರಕಲಿದೆ.
ಈ ಬಗ್ಗೆ ಈಟಿವಿ ಭಾರತ ಜೊತೆಗೆ ಮಾತನಾಡಿದ ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಅವರು
ಜಮ್ಮುವಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಬಳಿಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಈಗಾಗಲೇ ನಾಲ್ಕು ಮಂದಿ ದಾಖಲಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವರು ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಜನೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಕಾಶ್ಮೀರಿ ಪಂಡಿತರು ಬಯಸಿದಲ್ಲಿ ಪುನರ್ವಸತಿ ಕಲ್ಪಿಸುವುದು ಸರ್ಕಾರದ ಕರ್ತವ್ಯ: ಕೇಂದ್ರ ಸಚಿವ ಜೋಶಿ