ಉಪ್ಪಿನಂಗಡಿ, ದಕ್ಷಿಣ ಕನ್ನಡ: ಅನ್ಯಕೋಮಿನ ಯುವಕ ಹಾಗೂ ಯುವತಿಯ ಮೇಲೆ ಮಂಗಳವಾರ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರನ್ನು ವಶಕ್ಕೆ ಪಡೆದ ಘಟನೆಯನ್ನು ಆಕ್ಷೇಪಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಸಂಚರಿಸುತಿದ್ದ ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದ ಘಟನೆ ರಾತ್ರಿ ನಡೆದಿದೆ.
ಹಲ್ಲೆಗೊಳಗಾದ ಯುವಕ ನೀಡಿದ ದೂರಿನಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿದ್ದನ್ನು ಆಕ್ಷೇಪಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಪುತ್ತೂರು ಬಿಜೆಪಿ ಶಾಸಕ ಸಂಜೀವ ಮಠಂದೂರು ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರ ತಡರಾತ್ರಿ ದ.ಕ ಜಿಲ್ಲೆಯ ಉಪ್ಪಿನಂಗಡಿ ಬಳಿ ಶಾಸಕ ಸಂಜೀವ ಮಠಂದೂರು ಅವರನ್ನು ತಡೆದು ಕಾರ್ಯಕರ್ತರು ವಾಗ್ವಾದ ನಡೆಸಿದ್ದಾರೆ.
ಶಾಸಕ ಮಠಂದೂರು ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಕಾರ್ಯಕರ್ತರು ಉಪ್ಪಿನಂಗಡಿ ಬಳಿ ತಡೆದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸಕರು ಕಾರ್ಯಕರ್ತರ ಪರ ನಿಂತಿಲ್ಲ ಎಂಬುದು ಶಾಸಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸಲು ಕಾರಣ ಎನ್ನಲಾಗಿದೆ. ಅಲ್ಲದೇ ಇದೊಂದು ಬಿಜೆಪಿ ಸರ್ಕಾರದ ಹಿಂದೂ ವಿರೋಧಿ ಧೋರಣೆ ಎಂದು ಕಾರ್ಯಕರ್ತರು ಘೋಷಣೆಗಳನ್ನು ಕೂಗಿದರು.
ಗುಂಡ್ಯದಲ್ಲಿ ನಡೆದ ವಿಭಿನ್ನ ಕೋಮಿನ ಯುವಕ ಮತ್ತು ಯುವತಿ ಮೇಲಿನ ಹಲ್ಲೆ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರಾದ ಬಾಲಚಂದ್ರ(35) ಮತ್ತು ರಂಜಿತ್( 31) ಎಂಬುವರನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದಿದ್ದರು. ಪುತ್ತೂರು ತಾಲೂಕಿನ ಗುಂಡ್ಯ ಎಂಬಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿತ್ತು.
ಇದನ್ನೂ ಓದಿ: ಹಿಂದೂ ಯುವತಿ ಜೊತೆಗೆ ಮುಸ್ಲಿಂ ಯುವಕನ ಮೇಲೆ ಹಲ್ಲೆ ಆರೋಪ, ದೂರು ದಾಖಲು