ಮಂಗಳೂರು: ಮಂಗಳೂರಿನ ಮಳಲಿಯಲ್ಲಿ ದರ್ಗಾದ ನವೀಕರಣ ಮಾಡುವ ವೇಳೆ ಪ್ರಾಚೀನ ಕಟ್ಟಡವೊಂದರ ಕುರುಹು ಪತ್ತೆಯಾದ ಘಟನೆ ನಡೆದಿದೆ. ಸದ್ಯ ಕಾಮಗಾರಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ.
ಮಂಗಳೂರು ಹೊರವಲಯದ ಗಂಜಿಮಠ ಬಳಿಯ ಮಳಲಿಯಲ್ಲಿ ನವೀಕರಣಕ್ಕಾಗಿ ಅಸಯ್ಯಿದ್ ಅಬ್ದುಲ್ಲಾಹಿಲ್ ಮದನಿ ದರ್ಗಾದ ಮುಂಭಾಗವನ್ನು ಕೆಡವಿದಾಗ ಪ್ರಾಚೀನ ಕಟ್ಟಡದ ಪತ್ತೆಯಾಗಿದೆ. ಮಾಹಿತಿ ತಿಳಿದ ಮಂಗಳೂರು ತಹಶೀಲ್ದಾರ್ ಪುರಂದರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ವೇಳೆ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ನೇತೃತ್ವದಲ್ಲಿ ಕಾರ್ಯಕರ್ತರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡಬೇಕಾದ ಹಿನ್ನೆಲೆಯಲ್ಲಿ ನವೀಕರಣದ ಕಾಮಗಾರಿಯನ್ನು ಸ್ಥಗಿತಗೊಳಿಸಲು ತಹಶೀಲ್ದಾರ್ ಸೂಚನೆ ನೀಡಿದ್ದಾರೆ. ಇದೀಗ ನವೀಕರಣ ಕಾಮಗಾರಿ ಸ್ಥಗಿತಗೊಂಡಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ಜಿಲ್ಲಾಡಳಿತ ಹಳೆಯ ಭೂ ದಾಖಲೆ ಮತ್ತು ಮಾಲಿಕತ್ವದ ಪರಿಶೀಲನೆ ನಡೆಸಲಿದೆ. ನಾವು ವಕ್ಫ್ ಮತ್ತು ಮುಜರಾಯಿ ಇಲಾಖೆಯಿಂದ ವರದಿಯನ್ನು ತರಿಸಿಕೊಳ್ಳುತ್ತೇವೆ. ಹಕ್ಕುಗಳ ಸತ್ಯಾಸತ್ಯತೆ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೆ ಯಥಾಸ್ಥಿತಿ ಕಾಯ್ದುಕೊಳ್ಳಲು ಸೂಚಿಸಿದ್ದು, ಜನತೆ ಶಾಂತಿ ಕಾಪಾಡಬೇಕು ಎಂದು ತಿಳಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಪ್ರತಿಕ್ರಿಯಿಸಿ, ಮಾಹಿತಿ ತಿಳಿದ ಬಳಿಕ ಸ್ಥಳಕ್ಕೆ ಭೇಟಿ ನೀಡಲಾಯಿತು. ಅಗತ್ಯ ಬಂದೋಬಸ್ತ್ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ವಿಡಿಯೋ: ಕಾಶಿ ವಿಶ್ವನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ ಮಾರಿಷಸ್ ಪ್ರಧಾನಿ