ದಕ್ಷಿಣ ಕನ್ನಡ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ನಿರಂತರವಾಗಿ ಹೆಚ್ಚುತ್ತಿರುವ ಹಿನ್ನೆಲೆ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಜಿಲ್ಲೆಯ ಕಡಬದಲ್ಲಿ ಸೋಮವಾರ ಪ್ರತಿಭಟನೆ ನಡೆಸುವುದಾಗಿ ಕಡಬ ಬ್ಲಾಕ್ ಕಾಂಗ್ರೆಸ್ ತಿಳಿಸಿದೆ.
ಈ ಕುರಿತು ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ. ವರ್ಗೀಸ್, ಬಿಜೆಪಿ ಅಧಿಕಾರಕ್ಕೆ ಬಂದರೆ ಮೂವತ್ತು ರೂಪಾಯಿಗೆ ಪೆಟ್ರೋಲ್ ನೀಡುತ್ತೇವೆ ಎಂದವರು ಇದೀಗ ತುಟಿ ಬಿಚ್ಚುತ್ತಿಲ್ಲ. ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದರೂ ಅದನ್ನು ನಿಯಂತ್ರಣಕ್ಕೆ ತರಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸಾಧ್ಯವಾಗಿಲ್ಲ.
ಬಿಜೆಪಿ ಸರ್ಕಾರ ರೈತರ, ಕೂಲಿ ಕಾರ್ಮಿಕರ, ಮಹಿಳೆಯರ, ವಿದ್ಯಾರ್ಥಿಗಳ, ವ್ಯಾಪಾರಿಗಳ ಹಾಗೂ ವಾಹನ ಚಾಲಕರ ಜೀವನದೊಂದಿಗೆ ಚೆಲ್ಲಾಟ ಆಡುತ್ತಿದೆ. ಕೇವಲ ಅಧಿಕಾರ ವ್ಯಾಮೋಹದಿಂದ ಸಚಿವರು ಮತ್ತು ಶಾಸಕರು ಕಿತ್ತಾಟ ನಡೆಸುತ್ತಿದ್ದಾರೆಯೇ ಹೊರತು, ದೇಶದ ಆರ್ಥಿಕ ವ್ಯವಸ್ಥೆ ಸರಿಪಡಿಸಲು ಮುಂದಾಗುತ್ತಿಲ್ಲ ಎಂದು ಅವರು ಆರೋಪಿಸಿದರು.
ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಗೊಳಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.