ಮಂಗಳೂರು: ರಾಜ್ಯದಲ್ಲೇ ಗೆಳತಿ ಆಪ್ತ ಸಲಹಾ ಕೇಂದ್ರವನ್ನ ಮೊದಲ ಬಾರಿಗೆ ತೆರೆಯಲಾಗಿದ್ದು, ಇದು ರಾಜ್ಯಕ್ಕೆ ಮಾದರಿ ಸಲಹಾ ಕೇಂದ್ರವಾಗಿ ಮೂಡಿ ಬರಲಿದೆ ಎಂದು ದ.ಕ.ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಮಂಗಳೂರಿನ ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳಾ ಅಧ್ಯಯನ, ಸಂಶೋಧನಾ ಕೇಂದ್ರ, ಸಮೂಹ ಮಾಧ್ಯಮ ಸರ್ಟಿಫಿಕೇಟ್ ಕೋರ್ಸ್ ಹಾಗೂ ಮಹಿಳೆಯರು ಮತ್ತು ವಿದ್ಯಾರ್ಥಿನಿಯರಿಗೆ ಗೆಳತಿ ಆಪ್ತ ಸಲಹಾ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಉತ್ತಮ ಸಾಧನೆಯನ್ನು ಮಾಡುತ್ತಿದ್ದಾರೆ. ಮಾತ್ರವಲ್ಲದೆ ಕೇಂದ್ರ ಸರ್ಕಾರ ಮಹಿಳೆಯರ ಅಭಿವೃದ್ಧಿಗಾಗಿ ಉತ್ತಮ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದನ್ನು ಮಹಿಳೆಯರು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ವೈ ಭರತ್ ಶೆಟ್ಟಿ, ದ.ಕ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯ್ಕ್ ಇಂದಾಜೆ, ಕಾವೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ.ಯು.ತಾರಾ ರಾವ್, ಉಪನ್ಯಾಸಕಿ ಪ್ರಮೀಳಾ ರಾವ್, ಉಪನ್ಯಾಸಕ ಕುಂಚರಿಯ ಕೆ.ಕೆ. ಮತ್ತಿತರರು ಉಪಸ್ಥಿತರಿದ್ದರು.