ಮಂಗಳೂರು: ರಾಮ ಮಂದಿರಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರ ಅನುಕೂಲಕ್ಕಾಗಿ ಆಯೋಧ್ಯೆಯಲ್ಲಿ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ನೀಡುವಂತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಯುಪಿ ಸಿಎಂ ಯೋಗಿ ಆದಿತ್ಯನಾಥರಿಗೆ ಮನವಿ ಮಾಡಿದರು.
ಆದಿತ್ಯನಾಥರನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಉತ್ತರ ಪ್ರದೇಶದಲ್ಲಿ ನಿರ್ಮಾಣವಾಗುತ್ತಿರುವ ಶ್ರೀರಾಮ ಮಂದಿರಕ್ಕೆ ಭವಿಷ್ಯದಲ್ಲಿ ಭೇಟಿ ನೀಡುವ ಕರ್ನಾಟಕದ ಲಕ್ಷಾಂತರ ಭಕ್ತರ ಅನುಕೂಲಕ್ಕಾಗಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಐದು ಎಕರೆ ಭೂಮಿ ಮಂಜೂರು ಮಾಡುವಂತೆ ಈ ಹಿಂದೆ ಯಡಿಯೂರಪ್ಪನವರು ಸಲ್ಲಿಸಿದ ಮನವಿಯನ್ನು ಪುರಸ್ಕರಿಸುವಂತೆ ಮನವಿ ಮಾಡಿಕೊಂಡರು.
ಸಚಿವರ ಮನವಿಗೆ ಪ್ರತಿಕ್ರಿಯಿಸಿದ ಯೋಗಿ ಆದಿತ್ಯನಾಥ, ಕೂಡಲೇ ಕರ್ನಾಟಕ ಯಾತ್ರಿ ನಿವಾಸ ನಿರ್ಮಾಣಕ್ಕೆ ಭೂಮಿ ಮಂಜೂರು ಮಾಡಿ ಕರ್ನಾಟಕದಿಂದ ಆಗಮಿಸುವ ಭಕ್ತಾದಿಗಳಿಗೆ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.